ಮುರಾರ್ಜಿ ಶಾಲೆಯಲ್ಲಿ ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ

7adarshkdga5
Published on

ಕುಶಾಲನಗರ: ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಪಾಲಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಹೇಳಿದರು.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯಲ್ಲಿರುವ ಮುರಾರ್ಜಿ ದೇಸಾಯಿ ಸರ್ಕಾರಿ ವಸತಿ ಶಾಲೆ ಹಾಗೂ ವಿಜ್ಞಾನ ಪಿಯು ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಮತ್ತು ಸಂಚಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳು ಸುಧಾರಣೆಗೆ ವಿಶೇಷ ಒತ್ತು ನೀಡುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸುವುದು ಅಗತ್ಯ. ಹೀಗಾಗಿ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಮುರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪನೆ ಮಾಡಲಾಗಿದೆ ಎಂದರು.

ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಶಾಲೆಯು ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಭವಿಷ್ಯವನ್ನು ರೂಪಿಸುತ್ತಿದೆ ಎಂದು ಹೇಳಿದರು.

ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮುರಾರ್ಜಿ ದೇಸಾಯಿ ಶಾಲೆಗಳ ಸಮನ್ವಯಾಧಿಕಾರಿ ಲೋಕೇಶ್ ಪ್ರತಿಭಾ ಪುರಸ್ಕಾರ ನೀಡಿದರು. ಪ್ರಕೃತಿ ಶಾಲಾ ಸಂಚಿಕೆಯನ್ನು ಮಡಿಕೇರಿ ಶಾಸಕರು ಬಿಡುಗಡೆ ಮಾಡಿದರು.

ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ, ಮೈಸೂರು ಸಿಎಡಿಎ ಜಂಟಿ ನಿರ್ದೇಶಕ ತಿರುಮಲೇಶ್, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಕೂಡಿಗೆ ಡಯಟ್ ಹಿರಿಯ ಉಪನ್ಯಾಸ ಕೆ.ವಿ.ಸುರೇಶ್, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪಿ.ಶೇಖರ್ ಉಪಸ್ಥಿತರಿದ್ದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net