

ಮಂಡ್ಯ: ಅಭಿವೃದ್ಧಿಯ ಹರಿಕಾರ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಆ.20ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇವರಾಜ ಅರಸು ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾದ ನಾಯಕರಲ್ಲ. ಎಲ್ಲ ಬಡವರು, ರೈತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದವರು. ಅಂದಿನ ಕಾರ್ಯಕ್ರಮಕ್ಕೆ ಎಲ್ಲ ಸಂಘ ಸಂಸ್ಥೆಯ ಮುಖಂಡರನ್ನು ಆಹ್ವಾನಿಸಬೇಕು ಎಂದರು.
2022-23ನೇ ಸಾಲಿನ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಅಂತೆಯೇ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಬೇಕು. ಅಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳುವಂತೆ ಹಾಗೂ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಿ ವಿಶೇಷ ಮೆರಗು ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್, ವಿವಿಧ ಸಂಘಟನೆಗಳ ಮುಖಂಡರಾದ ಸಂದೇಶ್, ಸುರೇಶ್, ಪ್ರಶಾಂತ್, ಕೃಷ್ಣ, ರಾಜಣ್ಣ, ಯಶೋಧಗೌಡ ಇತರರಿದ್ದರು.