

ಮಂಡ್ಯ: ಮದ್ದೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.28ರಂದು ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಈ ಹಿನ್ನೆಲೆಯಲ್ಲಿ ನೀರನ್ನು ಪರಿಶೀಲನೆಗೆ ಒಳಪಡಿಸಿ ಎಂದರು.
ಸಾರ್ವಜನಿಕರಿಗೆ ನೀಡಲಾಗುವ ಊಟ ತಯಾರಿಕೆ ಸ್ಥಳ ಹಾಗೂ ವೇದಿಕೆ ಬಳಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ. ಆಹಾರವನ್ನು ಪರಿಶೀಲನೆಗೆ ಒಳಪಡಿಸಿ. ಸುತ್ತಮುತ್ತಲೂ ಸ್ವಚ್ಛತೆಯನ್ನು ಕಾಪಾಡಲು ಪೌರಕಾರ್ಮಿಕರನ್ನು ನಿಯೋಜಿಸಿ ನಿಗಾ ವಹಿಸಿ. ಆಹಾರ ವಿತರಣೆ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ 60 ಕೌಂಟರ್ ತೆರೆಯಿರಿ. ಯಾವುದೇ ನೂಕು ನುಗ್ಗಲು ಉಂಟಾಗದಂತೆ ಸಿಬ್ಬಂದಿ ನಿಯೋಜಿಸಿ, ಆಹಾರ ವಿತರಣೆ ಮಾಡಿ ಎಂದರು.
ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟಿನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರು, ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳಿಗೆ ತಲುಪಿಸಿ. ಅಂದು ಸಿಎಂ ಅವರು 1,168.37 ಕೋಟಿ ರೂ ವೆಚ್ಚದ 88 ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಲಿದ್ದಾರೆ. ಲೋಕೋಯೋಗಿ ಇಲಾಖೆಗೆ ಸಂಬಂಧಿಸಿದಂತೆ 81.29 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 12.15 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 8 ಕೋಟಿ ರೂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 257.18 ಕೋಟಿ ರೂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 2.45 ಕೋಟಿ ರೂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ 16.49 ಕೋಟಿ ರೂ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ 47.28 ಕೋಟಿ ರೂ, ಕಾವೇರಿ ನೀರಾವರಿ ನಿಗಮದ 484.33 ಕೋಟಿ ರೂ, ಮದ್ದೂರು ಪುರಸಭೆ 5.25 ಕೋಟಿ ರೂ, ಸಮಾಜ ಕಲ್ಯಾಣ ಇಲಾಖೆ 23 ಕೋಟಿ ರೂ, ಮಂಡ್ಯ ವಿಶ್ವವಿದ್ಯಾನಿಲಯ 8.50 ಕೋಟಿ ರೂ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 187 ಕೋಟಿ ರೂ, ಕೃಷಿ ಇಲಾಖೆಗೆ 2 ಕೋಟಿ ರೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 1.80 ಕೋಟಿ ರೂ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ 21.65 ಕೋಟಿ ರೂ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಲಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.