

ಮಂಡ್ಯ: ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹ ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನು ಬಾಹಿರ. ಆದ್ದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗಣಪತಿ ಹಬ್ಬ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹ ಸ್ಥಾಪಿಸಿ ಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯ. ಆದರೆ ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ ಎಂದರು.
ಪಿಒಪಿ ಗಣಪತಿ ಮೂರ್ತಿ ಮಾರಾಟ ಮಾಡುವುದು ಸಹ ಕಾನೂನು ಬಾಹಿರ. ಅಧಿಕಾರಿಗಳು ಸಾಗಾಣಿಕೆ ತಡೆಗಟ್ಟಲು ಚೆಕ್‌ಪೋಸ್ಟ್ ಬಳಿ ಹಾಗೂ ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಏಕ ಗವಾಕ್ಷಿ ಕೇಂದ್ರ ತೆರೆಯಲಾಗುವುದು. ಅನುಮತಿ ನೀಡುವ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಪೊಲೀಸ್ ಹಾಗೂ ವಿದ್ಯುತ್ ಇಲಾಖೆ ಅವರು ವಿದ್ಯುತ್ ಕಂಬಗಳಿಂದ ಯಾವುದೇ ಅವಘಡ ಆಗದಂತೆ ಪರಿಶೀಲಿಸಿದ ನಂತರ ಅನುಮತಿ ನೀಡಬೇಕು ಎಂದು ಹೇಳಿದರು.
ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳ ಸಮಿತಿ ರಚಿಸಿ ಜವಾಬ್ದಾರಿಗಳೊಂದಿಗೆ ಆದೇಶ ಹೊರಡಿಸಲಾಗುವುದು. ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಪಿಒಪಿ ಗಣಪತಿ ಮಾರಾಟ ಹಾಗೂ ಪ್ರತಿಷ್ಠಾಪನೆಯಾಗದಂತೆ ನಿಗಾ ವಹಿಸಿ. ನೀರಿನ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿ, ಇವುಗಳ ನೀರು ಮಾಲಿನ್ಯವಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರ ಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡ ಯಾವುದೇ ರೀತಿಯ ಪಿಒಪಿಯಿಂದ ತಯಾರಿಸಿದ ಗಣೇಶ ವಿಗ್ರಹ ಹಾಗೂ ಇತರೆ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗೂ ಅವುಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪಿಸುವವರಿಂದ ಗಣಪತಿ ವಿಸರ್ಜನೆ ಮಾಡುವ ಸ್ಥಳದ ಮಾಹಿತಿ ಸಹ ಪಡೆದುಕೊಳ್ಳಿ ಎಂದರು.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ / ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಅಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ / ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಿ. ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ / ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ, ಪೌರಾಯುಕ್ತೆ ಪಂಪಶ್ರೀ ಇತರರಿದ್ದರು.
ಬಣ್ಣಲೇಪಿತ ಮೂರ್ತಿ ನಿಷೇಧಿಸಿ
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ರಾಸಾಯನಿಕ ಬಣ್ಣಲೇಪಿತ ಮೂರ್ತಿಗಳ ಬಳಕೆಯನ್ನು ನಿಷೇಧ ಮಾಡುವಂತೆ ಒತ್ತಾಯಿಸಿ ವಿಜ್ಞಾನ ಮತ್ತು ಪರಿಸರ ಶಿಕ್ಷಣ ಅಕಾಡೆಮಿಯಿಂದ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ಡಿಸಿ, ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.
ಅಕಾಡೆಮಿ ಜಿಲ್ಲಾ ಗೌರವಾಧ್ಯಕ್ಷ ಡಾ.ಬಿ.ಕೆ.ಸುರೇಶ್, ವಿಜ್ಞಾನ ಪರಿಷತ್ ಜಿಲ್ಲಾ ಕಾರ್ಯದರ್ಶಿ ಪರಿಸರ ಮಿತ್ರ ಜಯಶಂಕರ, ಸದಸ್ಯರಾದ ನಂಜರಾಜು, ಲೋಕೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಕಾರ್ಯದರ್ಶಿ ಸತ್ಯಮೂರ್ತಿ, ಯೋಗೇಶ್ ಇತರರಿದ್ದರು.