ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ

udp-16-kannada
Published on

ಉಡುಪಿ: ಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ ನೀಡಿದರು.

ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನ. 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್​, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್​.ಎಸ್​.ಎಸ್​, ಎನ್​.ಸಿ.ಸಿ. ಸ್ಕೌಟ್​ ಮತ್ತು ಗೈಡ್ಸ್​, ಸೇವಾದಳ, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

ಬೆಳಗ್ಗೆ 8 ಗಂಟೆಗೆ ನಗರದ ಬೋರ್ಡ್​ ಹೈಸ್ಕೂಲ್​ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.

ರಾಜ್ಯ ಸರ್ಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನ ಅಜ್ಜರಕಾಡಿನ ಭುಜಂಗ ಪಾರ್ಕ್​ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​, ಎಎಸ್​ಪಿ ಕೆ.ಎಸ್​ ಹೆಗ್ಡೆ, ನಗರಸಭೆ ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್​ ವಿ. ನಾಯಕ್​, ಡಿ.ಡಿ.ಪಿ.ಐ ಗಣಪತಿ ಕೆ., ಡಿ.ಡಿ.ಪಿ.ಯು. ಮಾರುತಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net