ಮೈಸೂರಿನಲ್ಲಿ ‘ಗೃಹಲಕ್ಷ್ಮಿ’ ಕಾರ್ಯಕ್ರಮಕ್ಕೆ ಸಿದ್ಧತೆ

Preparation for 'Grihalakshmi' program in Mysore
Published on

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆ.30 ರಂದು ಗೃಹಲಕ್ಷ್ಮಿಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಂ ಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಕಾಮಗಾರಿಯನ್ನು ವೀಕ್ಷಿಸಿ ಅಗತ್ಯ ನಿರ್ದೇಶನ ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಜನಸ್ತೋಮ ನಿಯಂತ್ರಿಸಲು ಹಾಗೂ ವಿಐಪಿಗಳ ಸಂಚಾರದಲ್ಲಿ ಯಾವುದೇ ರೀತಿಯ ಲೋಪ ಉಂಟಾಗದಂತೆ ಎಚ್ಚರ ವಹಿಸಲು ಹಾಗೂ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಸಿದ್ಧತೆಗಳನ್ನು ನಗರ ಪೊಲೀಸ್ ಆಯುಕ್ತ ರಮೇಶೋ ಬಾನೋತ್ ಪರಿಶೀಲಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂಬಂಧ ವಾಹನ ನಿಲುಗಡೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ , ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೇದಿಕೆ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆಯಲ್ಲಿ ಮೈದಾನದ ಬಳಿಯಲ್ಲಿಯೇ ಮೊಬೈಲ್ ಶೌಚಗೃಹ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಕಲ್ಪಿಸಿ ವೈದ್ಯರ ತಂಡ ನಿಯೋಜಿಸಬೇಕು ಎಂದೂ ಸೂಚನೆ ನೀಡಿದರು.

ಈ ಸಂದರ್ಭ ನಗರ ಪಾಲಿಕೆ ಆಯುಕ್ತ ಹರ್ಷದ್ ಉರ್ ರೆಹಮಾನ್ ಷರೀಫ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net