

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಶತಮಾನದ ಮೈಲಿಗಲ್ಲು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಶತಮಾನೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಅಧಿವೇಶನದ ಕೊಡುಗೆ ಸ್ಮರಿಸಲು ಬಜೆಟ್‌ನಲ್ಲಿ 2 ಕೋಟಿ ರೂ. ಅನುದಾನ ಒದಗಿಸಿದ್ದು, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ದಿಲೀಪ್ ಕಾಮತ್ ಮಾತನಾಡಿ, ಕಾಂಗ್ರೆಸ್ ಅಧಿವೇಶನ ಸಂದರ್ಭದಲ್ಲಿ ಅಂಗೀಕರಿಸಲಾದ ಗೊತ್ತುವಳಿಗಳ ಕಿರು ಹೊತ್ತಿಗೆ ಪ್ರಕಟಿಸಬೇಕು, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಬೇಕು ಎಂದರು.
ಸಾಹಿತಿ ಡಾ. ಸರಜೂ ಕಾಟ್ಕರ್ ಮಾತನಾಡಿ, ಶತಮಾನೋತ್ಸವದ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಬೇಕು, ಅಧಿವೇಶನದ ದಾಖಲೆಗಳು, ಛಾಯಾಚಿತ್ರಗಳ ಪ್ರದರ್ಶನ ಏರ್ಪಡಿಸಬೇಕು ಮತ್ತು ಟಿಳಕವಾಡಿಯಲ್ಲಿರುವ ವೀರಸೌಧವನ್ನು ಪುನರುಜ್ಜೀವನಗೊಳಿಸಬೇಕು ಎಂದರು.
ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಟ್ರಸ್ಟ್ ಅಧ್ಯಕ್ಷ ರವೀಂದ್ರ ದೇಶಪಾಂಡೆ, ಕಾರ್ಯದರ್ಶಿ ಸುಭಾಷ ಕುಲಕರ್ಣಿ ಮಾತನಾಡಿ, ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಕಾರಣೀಭೂತರಾದ ಗಂಗಾಧರರಾವ್ ದೇಶಪಾಂಡೆ ಅವರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅವರ ಸ್ಮಾರಕ ನಿರ್ಮಾಣ ಪೂರ್ಣಗೊಳಿಸಲು 50 ಲಕ್ಷ ರೂ. ಒದಗಿಸಬೇಕು ಎಂದರು.
ಪತ್ರಕರ್ತ ಹೃಷಿಕೇಶ್ ಬಹದ್ದೂರ ದೇಸಾಯಿ, ಆಧುನಿಕ ಮಾಧ್ಯಮಗಳನ್ನು ಬಳಸಿ ಬೆಳಗಾವಿ ಅಧಿವೇಶನದ ಸಮಗ್ರ ಮಾಹಿತಿ ಹೊಂದಿರುವ ಡಾಕ್ಯುಮೆಂಟರಿ ನಿರ್ಮಿಸಬೇಕು. ಜಿಲ್ಲೆಯಲ್ಲಿರುವ ಖಾದಿ ಉದ್ಯಮಕ್ಕೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಾರಕ್ಕೆ ಅನಕೂಲವಾಗುವಂತೆ ಆನ್‌ಲೈನ್ ಮಾರಾಟ ವೇದಿಕೆ ಕಲ್ಪಿಸಬಹುದು ಎಂದು ಸಲಹೆ ನೀಡಿದರು.
ಕನ್ನಡಪರ ಹೋರಾಟಗಾರ ಶ್ರೀನಿವಾಸ್ ತಾಳೂರಕರ, ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಟಿಳಕವಾಡಿಯ ವೀರಸೌಧ ಬಳಿ ಮುಖ್ಯ ರಸ್ತೆಯಲ್ಲಿ ಕಮಾನು ಮಾದರಿಯ ಮಹಾದ್ವಾರ ನಿರ್ಮಿಸಬಹುದು ಎಂದರು.
ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗಾನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿ ಇತರರಿದ್ದರು.