ಸೆ.7ರಂದು ಬೃಹ್ಮರ್ಷಿ ನಾರಾಯಣ ಗುರು ಜಯಂತಿ...

Abid 2
Published on

ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಮಾಹಿತಿ

ಸಿದ್ಧತೆಗಾಗಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಪ್ರತಿವರ್ಷವೂ ಜಿಲ್ಲಾ ಮಟ್ಟದಲ್ಲಿ ನಡೆಸುವ ಬೃಹ್ಮರ್ಷಿ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸುವಂತಾಗಲು ಅಗತ್ಯ ಸಿದ್ಧತೆ ಮಾಡಬೇಕು. ಈ ಬಾರಿ ಸೆ.7ರಂದು ಮಣಿಪುರದಲ್ಲಿ ಸಮಾರಂಭ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಗಸ್ಟ್​ 4ರಂದು ಬೆಳಗ್ಗೆ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಬೃಹ್ಮರ್ಷಿ ನಾರಾಯಣ ಗುರು ಜಯಂತಿ ಆಚರಣೆ ಹಿನ್ನೆಲೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಉಪನ್ಯಾಸ, ಭಜನಾ ಕಾರ್ಯಕ್ರಮ

ಸೆ.7ರಂದು ಬೆಳಗ್ಗೆ 10 ಗಂಟೆಗೆ ತಾಲೂಕಿನ ಮಣಿಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಖ್ಯಾತ ಉಪನ್ಯಾಸಕರಿಂದ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಕಾರ್ಯಕ್ರಮದ ಆರಂಭದಲ್ಲಿಯೇ ಗುರುಗಳ ಕುರಿತು ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗುರುಗಳ ತತ್ವ, ಆದರ್ಶ, ಜೀವನ ಚರಿತ್ರೆ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡುವಂತಾಗಲು ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಆಯೋಜಿಸಬೇಕು. ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದರು.

ಮನಮುಟ್ಟುವಂತಿರಲಿ ಕಾರ್ಯಕ್ರಮ

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮಾತನಾಡಿ, ನಾರಾಯಣ ಗುರುಗಳ ಆದರ್ಶ ಜನರಿಗೆ ಮನಮುಟ್ಟುವ ರೀತಿಯಲ್ಲಿ ಕಾರ್ಯಕ್ರಮ ನಡೆಯಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆಯೂ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಮಾಜದ ಬಾಂಧವರು ಮಾತನಾಡಿ, ಜಯಂತಿಯಂದು ಎಲ್ಲ ಶಾಲಾ-ಕಾಲೇಜುಗಳಲ್ಲಿ ನಾರಾಯಣ ಗುರುಗಳ ಸಂದೇಶ ತಲುಪುವಂತೆ ಹಾಗೂ ಅವರ ಜೀವನ ಚರಿತ್ರೆ ಪುಸ್ತಕವನ್ನು ಶಾಲಾ ಗ್ರಂಥಾಲಯಗಳಲ್ಲಿಟ್ಟು ಮಕ್ಕಳಿಗೆ ಓದಲು ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿದರು. ಕಾರ್ಯಕ್ರಮದ ರೂಪು-ರೇಷೆ ಹಾಗೂ ಇನ್ನಿತರ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಬೃಹ್ಮರ್ಷಿ ನಾರಾಯಣ ಗುರು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಸೆ.7ರಂದು ತಹಸೀಲ್ದಾರರ ಮೇಲುಸ್ತುವಾರಿಯಲ್ಲಿ ಕಡ್ಡಾಯವಾಗಿ ಬೃಹ್ಮರ್ಷಿ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳು, ಗಣ್ಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಬೇಕು. | ಅಬೀದ್​ ಗದ್ಯಾಳ. ಅಪರ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net