

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತ ಎಣಿಕೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತ ಎಣಿಕೆಯು ಜೂ.4ರಂದು ನಡೆಯಲಿದೆ. ಇದಕ್ಕಾಗಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿ ಟಿವಿ ಹಾಗೂ ವೀಡಿಯೊ ಚಿತ್ರೀಕರಣಕ್ಕೆ ವ್ಯವ್ಯಸ್ಥೆ ಮಾಡಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಸೂಚಿಸಿದರು.
ಮತ ಎಣಿಕೆ ಕೇಂದ್ರಗಳ ಬಳಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿರಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಬೇಕು. ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಿ ಈಗಾಗಲೇ ತರಬೇತಿ ನೀಡಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಅಂಚೆ ಮತ ಪತ್ರ ಎಣಿಕೆಯನ್ನು ಸರಿಯಾಗಿ ಮಾಡಬೇಕೆಂದು ಸೂಚಿಸಿದರು.
ಪದವೀಧರರ ಕ್ಷೇತ್ರ ಕುರಿತು ಸಭೆ:
ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಮೇ 3ರಂದು ಮತದಾನ ನಡೆಯಲಿದ್ದು, ಈ ಸಂಬಂಧ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚಿಸಿದರು.
ಸಭೆಯಲ್ಲಿ ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ವಿನೋತ್ ಪ್ರಿಯಾ, ಸ್ನೇಹಲ್, ದಯಾನಂದ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ ಸೇರಿ ಇನ್ನಿತರ ಅಧಿಕಾರಿಗಳಿದ್ದರು.