ಸಮನ್ವಯ ಸಮಿತಿ ರಚಿಸಲು ನಿರ್ಧಾರ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

Preparatory meeting of the Kasapa conference Mandya
Published on

ಮಂಡ್ಯ: ಮಂಡ್ಯದಲ್ಲಿ ಡಿ.20, 21 ಮತ್ತು 22ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜವಾಬ್ದಾರಿ ನಿರ್ವಹಿಸಲು ಸಮನ್ವಯ ಸಮಿತಿಯೊಂದನ್ನು ರಚಿಸಲು ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಜಿಲ್ಲಾ ಕಸಾಪ ಪದಾಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸಲು ಹಾಗೂ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ದೃಷ್ಟಿಯಿಂದ ಸಮ್ಮೇಳನ ಮುಗಿಯುವವರೆಗೆ ತಾತ್ಕಾಲಿಕ ಸಮಿತಿಯೊಂದನ್ನು ರಚಿಸುವ ನಿರ್ಧಾರಕ್ಕೆ ಬರಲಾಯಿತು. ಅದರಂತೆ ಸಮಿತಿ ರಚಿಸುವ ಜವಾಬ್ದಾರಿಯನ್ನು ಸಚಿವ ಎನ್.ಚಲುವರಾಯಸ್ವಾಮಿ, ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ ಜೋಷಿ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ವಹಿಸಲಾಯಿತು.

ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ರಾಜ್ಯಸರ್ಕಾರ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಒಪ್ಪಿಗೆ ನೀಡಿದೆ. ಅದಕ್ಕಾಗಿ ಸಿದ್ಧತೆಗಳು ಆರಂಭವಾಗಬೇಕು. ಯಾವುದೇ ಅಪಸ್ವರವಿಲ್ಲದೆ ಸೌಹಾರ್ದ, ಸಹಕಾರ, ಸಮನ್ವಯತೆಯಿಂದ ಕೆಲಸ ನಿರ್ವಹಿಸಲು ನಿಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಲು ಈ ಸಭೆ ಕರೆಯಲಾಗಿದೆ. ಮೂರನೇ ಬಾರಿ ನಡೆಯುತ್ತಿರುವ ಈ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕು. ಅದಕ್ಕಾಗಿ ಎಲ್ಲರೂ ಜವಾಬ್ದಾರಿ ತೆಗೆದುಕೊಂಡು ಕೈ ಜೋಡಿಸುವ ಭರವಸೆ ನೀಡಿದರೆ ತಾವು ಮುಂದುವರೆಯುವುದಾಗಿ ತಿಳಿಸಿದರು.

ಅಧ್ಯಕ್ಷ ಡಾ.ಮಹೇಶ ಜೋಷಿ ಮಾತನಾಡಿ, ಹಾವೇರಿಯಲ್ಲಿ ನಡೆದ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ ನಡೆಯುವ ಸಮ್ಮೇಳನ ಮುಂದೆ ನಡೆಯುವ ಸಮ್ಮೇಳನಗಳಿಗೆ ಮಾರ್ಗದರ್ಶಿಯಾಗಬೇಕು. ಆ ರೀತಿ ಸಮ್ಮೇಳನ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಸಮ್ಮೇಳನ ಪುಸ್ತಕ ಪ್ರಕಟಣಾ ಸಮಿತಿ ಅಧ್ಯಕ್ಷ ಎಚ್.ಎಸ್.ಮುದ್ದೇಗೌಡ, ಕಸಾಪ ಮಾಜಿ ಅಧ್ಯಕ್ಷರಾದ ಜಿ.ಟಿ.ವೀರಪ್ಪ, ಡಾ.ಮೀರಾ ಶಿವಲಿಂಗಯ್ಯ, ಡಿ.ಪಿ.ಸ್ವಾಮಿ, ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ತಾಲೂಕು ಅಧ್ಯಕ್ಷರಾದ ಚಂದ್ರಲಿಂಗು, ಪ್ರಕಾಶ್ ಮೇನಾಗರ, ಬಸವೇಗೌಡ ಖರಡ್ಯ, ಮಂಜುನಾಥ್ ಬಲ್ಲೇನಹಳ್ಳಿ, ಸುಜಾತಾ ಕೃಷ್ಣ, ಕ್ರಾಂತಿಸಿಂಹ, ಎಂ.ಸಿ.ಭಾಸ್ಕರ್, ಅಂಜನಾ ಶ್ರೀಕಾಂತ್, ವಿ.ಹರ್ಷ ಪಣ್ಣೆದೊಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net