ಅ.28ರಂದು ಸುವರ್ಣ ಮಹೋತ್ಸವ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

Preparatory meeting on the Golden Jubilee Mandya
Published on

ಮಂಡ್ಯ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅ.28ರಂದು ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಆದ್ದರಿಂದ ಉತ್ತಮ ರೀತಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದರು.

ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ ಮಾಲಿನ್ಯ ಎಲ್ಲ ರೀತಿಯ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮಾಡಲಾಗುವುದು. ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕಾಗಿ ಪ್ರತಿ ತಾಲೂಕಿಗೂ ತಲಾ 2 ಲಕ್ಷ ರೂ ನೀಡಲಾಗುವುದು. ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಆಶು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಆಯೋಜಿಸಿ. ಅದರಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಎನ್‌ಎಸ್‌ಎಸ್, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಬೇಕು. ಪರಿಸರ ಸಂರಕ್ಷಣೆಯೂ ಕೂಡ ಶೈಕ್ಷಣಿಕ ಚಟುವಟಿಕೆ ಇದ್ದಂತೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಕಚೇರಿಯ ಜಂಟಿ ನಿರ್ದೇಶಕ ದಿನೇಶ್, ಪೌರಾಯುಕ್ತೆ ಪಂಪಾಶ್ರೀ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ನಾಗನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net