ತಿ.ನರಸೀಪುರ ತಾಲೂಕಿನ ಅಭಿವೃದ್ಧಿಗೆ ಯೋಜನೆ ರೂಪಿಸಿ

21 dec tnp 01
ತಿ.ನರಸೀಪುರಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ತಾಲೂಕು ಉಸ್ತುವಾರಿ ಕಾರ್ಯದರ್ಶಿ ಎಂ.ಕೆ.ಸವಿತಾ ಅವರು ಪಟ್ಟಣದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಭೋಜನ ಸವಿದರು. ರಾಮೇಗೌಡ, ಕೋಮಲಾ ಇದ್ದರು.
Published on

ತಿ.ನರಸೀಪುರ: ತಾಲೂಕಿನ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ, ಸರ್ಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಲು ಆಡಳಿತ ವರ್ಗ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯೂ ಆದ ತಾಲೂಕು ಉಸ್ತುವಾರಿ ಕಾರ್ಯದರ್ಶಿ ಎಂ.ಕೆ.ಸವಿತಾ ಸೂಚನೆ ನೀಡಿದರು.

ಪಟ್ಟಣಕ್ಕೆ ಇತ್ತೀಚೆಗೆ ಭೇಟಿ ನೀಡಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳನ್ನು ಪರಿಶೀಲನೆ ನಡೆಸಿದರು. ಇದಕ್ಕೂ ಮೊದಲು ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ವಿವಿಧ ಇಲಾಖೆಗಳಿಗೆ ಬರುವ ಎಲ್ಲ ಸವಲತ್ತುಗಳನ್ನು ಅರ್ಹರಿಗೆ ಸಮರ್ಪಕವಾಗಿ ವಿತರಿಸಬೇಕು. ಜನರಿಗೆ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಬೇಕು ಎಂದು ಸಲಹೆ ನೀಡಿದರು.

ಸಾರ್ವಜನಿಕರಿಂದ ಬರುವ ಅರ್ಜಿ, ಅಹವಾಲುಗಳನ್ನು ಆಲಿಸಬೇಕು. ಸೌಲಭ್ಯಗಳಿಗೆ ಅರ್ಹರಿದ್ದರೆ ಸಕಾಲದಲ್ಲಿ ವಿತರಣೆ ಮಾಡಬೇಕು. ಯಾವುದೇ ಇಲಾಖೆ ಅಧಿಕಾರಿಗಳು ಸಾರ್ವಜನಿಕರನ್ನು ಅಲೆಸದೆ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಿ, ಮತ್ತೆ ದೂರುಗಳು ಬಾರದಂತೆ ಕರ್ತವ್ಯ ನಿರ್ವಹಿಸಿ. ಬನ್ನೂರು ಹಾಗೂ ತಿ.ನರಸೀಪುರ ಪುರಸಭೆ ಮುಖ್ಯಾಧಿಕಾರಿಗಳು ಪ್ರತಿ ವಾರ್ಡ್‌ಗಳಿಗೆ ಭೇಟಿ ನೀಡಿ, ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಬಗೆಹರಿಬೇಕು. ರಸ್ತೆ, ವಿದ್ಯುತ್ ದೀಪ, ಸ್ವಚ್ಛತೆ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅಭಾವ ಆಗದಂತೆ ಆದ್ಯತೆ ನೀಡಬೇಕು. ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸಿದರೆ ಸರ್ಕಾರದ ಯೋಜನೆಗಳು ಸಾರ್ಥಕವಾಗುತ್ತದೆ ಎಂದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗೃಹಲಕ್ಷ್ಮಿ ಯೋಜನೆಯಿಂದ ಯಾವ ಮಹಿಳೆಯರು ವಂಚಿತರಾಗದಂತೆ ನೋಡಿಕೊಳ್ಳುವಂತೆ ಸಿಡಿಪಿಒ ಅವರಿಗೆ ಸೂಚಿಸಿದರು. ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿಯಂಥ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಂ.ಕೆ.ಸವಿತಾ ಅವರಿಗೆ ಮಾಹಿತಿ ನೀಡಿದರು.

ಸಭೆ ಬಳಿಕ ಸಮಾಜ ಅಭಿವೃದ್ಧಿ ಇಲಾಖೆ ಸೇರಿದಂತೆ, ಪರಿಶಿಷ್ಟ ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಅಲ್ಲಿನ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ತಪಾಸಣೆ, ಕ್ರೀಡೆ ಮತ್ತು ಕಲೆ, ಚಟುವಟಿಕೆಗಳಲ್ಲಿ ಪ್ರೋತ್ಸಾಹ ನೀಡಿ ಎಂದು ಆಯಾಯ ನಿಲಯಗಳ ಪಾಲಕರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಊಟವನ್ನು ಸೇವಿಸಿದರು.

ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್, ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಸ್.ಅನಂತರಾಜು, ಸಹಾಯಕ ಕೃಷಿ ನಿರ್ದೇಶಕಿ ಕೆ.ಎಸ್.ಸುಹಾಸಿನಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎನ್.ಕೋಮಲಾ, ಸಮಾಜ ಕಲ್ಯಾಣ ಅಧಿಕಾರಿ ರಾಮೇಗೌಡ, ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಎಂ.ರಾಜಣ್ಣ, ಸಿಡಿಪಿಒ ಗೋವಿಂದರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net