

ಸಿರಗುಪ್ಪ; ತಾಲೂಕಿನಲ್ಲಿ ಏ.5 ರಂದು ಡಾ.ಬಾಬು ಜಗಜೀವನರಾಮ್ ಮತ್ತು ಏ.14 ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಹಸೀಲ್ದಾರ್ ಎಚ್.ವಿಶ್ವನಾಥ ಸೂಚಿಸಿದರು.
ಇದನ್ನೂ ಓದಿ:ಅಂಬೇಡ್ಕರ್ ಜಯಂತಿ ಅದ್ದೂರಿ, ಅರ್ಥಪೂರ್ಣ ಆಚರಣೆ
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಜಯಂತಿ ನಿಮಿತ್ತ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಳೆದ ಮೂರ‌್ನಾಲ್ಕು ವರ್ಷಗಳಿಂದ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಜಯಂತಿಯನ್ನು ಸರಳವಾಗಿ ಆಚರಿಸಲಾಗಿತ್ತು ಎಂದರು.
ಏ.14 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರ ಪೂರ್ಣಕುಂಭ, ಕಳಸ ಹಾಗೂ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ನಗರದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ಆಯೋಜಿಸುವಂತೆ ತಿಳಿಸಿದರು.
ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ಆಯೋಜಿಸಬೇಕು. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ತಾಪಂ ಇಒ ಪ್ರಸನ್ನ ಕುಮಾರ್, ವಾಲ್ಮೀಕಿ ವಿದ್ಯಾ ಅಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ.ಸತೀಶ, ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಕೊಡ್ಲೆ ಮಲ್ಲಿಕಾರ್ಜುನ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಯು.ವೆಂಕೋಬ ಇತರರಿದ್ದರು.