

ಶ್ರೀರಂಗಪಟ್ಟಣ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಹ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರಿಸಮನಾಗಿ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಪಡೆದು ಸ್ಪರ್ಧಾತಾತ್ಮಕ ಜಗತ್ತಿನ ಪ್ರತಿಭಾನ್ವಿತರಾಗಿ ಹೊರಹೊಮ್ಮಬೇಕು ಎಂದು ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ಎ.ಬಿ. ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.
ತಾಲೂಕು ಆಡಳಿತದ ಸಹಯೋಗದೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಪಟ್ಟಣದ ಶ್ರೀರಂಗನಾಥಸ್ವಾಮಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಪಟ್ಟಣ ಹಾಗೂ ಗಂಜಾಂ ವ್ಯಾಪ್ತಿಯ 12 ಸರ್ಕಾರಿ ಶಾಲೆಗಳ 637 ವಿದ್ಯಾರ್ಥಿಗಳಿಗೆ ಶಾಲಾ ಪಠ್ಯ ಪುಸ್ತಕಗಳ ಜತೆಗೆ ವೈಯಕ್ತಿಕವಾಗಿ ತಮ್ಮಿಂದ ಉಚಿತ ಶಾಲಾ ಬ್ಯಾಗ್ ಹಾಗೂ ನೋಟ್‌ಬುಕ್ ವಿತರಿಸಿ ಮಾತನಾಡಿದರು.
ಇತ್ತೀಚಿನ ಕೆಲ ವರ್ಷಗಳಿಂದ ಗ್ರಾಮೀಣ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲೂ ತಮ್ಮ ಮಕ್ಕಳನ್ನು ದಾಖಲಾತಿ ಮಾಡಿಸುವಲ್ಲಿ ಪೋಷಕರು ಹಿಂದೆ ಸರಿಯುತ್ತಿದ್ದಾರೆ. 1ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಬೇಸರದ ಸಂಗತಿ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಹ ಸಾಕಷ್ಟು ಯೋಜನೆ ರೂಪಿಸಿ ಹಲವು ಮಾರ್ಗಸೂಚಿಗಳೊಂದಿಗೆ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಹಾಗಾಗಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಜ್ಞಾನವನ್ನು ನೈಪುಣ್ಯತೆಯಿಂದ ತುಂಬಿ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಸರಿಸಮಾನಕ್ಕೆ ಕೌಶಲ ಜತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನಾಗಿಸುವ ಮೂಲಕ ತಮ್ಮ ಮಕ್ಕಳಿಂದ ಪಾಲಕರು ಬಯಸುವ ನೀರಿಕ್ಷೆಯನ್ನು ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.
ಪುರಸಭಾ ಅಧ್ಯಕ್ಷ ಎಂ.ಎಲ್.ದಿನೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ನಂದೀಶ್, ಸದಸ್ಯರಾದ ಎಸ್.ಎನ್.ದಯಾನಂದ್, ಎಸ್.ನಂದೀಶ್, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒ ವೇಣು, ಪುರಸಭಾ ಮುಖ್ಯಾಧಿಕಾರಿ ಎಂ.ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ.ಮಹೇಶ್, ಶಿಕ್ಷಣ ಸಂಯೋಜಕಿ ಪ್ರತಿಮಾ, ಶ್ರೀರಂಗಪಟ್ಟಣ ಯುವ ಕಾಂಗ್ರೆಸ್ ಅಧ್ಯಕ್ಷ ರಜನಿಕಾಂತ್, ಕಾಂಗ್ರೆಸ್ ಮುಖಂಡರಾದ ಸೋಮಸುಂದರ್, ಲೋಕೇಶ್, ವೆಂಕಟರಮಣ್, ಭಾಸ್ಕರ್, ಚೇತನ್, ಅಭಿಲಾಷ್ ಇತರರು ಇದ್ದರು.