ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ: ಬೋಸರಾಜು

bosaraj visit
Published on

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ವೀಕ್ಷಿಸಿದರು.


ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ ಜಲಪಾತ ಬಳಿ ಸೇತುವೆ ಹೀಗೆ ಮಳೆಹಾನಿ ಪ್ರದೇಶ ಹಾಗೂ ಮದಾಪುರ ಬಳಿಯ ಜಂಬೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕುಂದುಕೊರತೆ ಆಲಿಸಿದರು.


ಬಳಿಕ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.


ಮನೆ, ರಸ್ತೆ, ಸೇತುವೆ, ತಡೆಗೋಡೆ, ವಿದ್ಯುತ್ ಕಂಬ ಹಾಗೂ ಪರಿವರ್ತಕಗಳು, ಬೆಳೆ ಹಾನಿ ಹೀಗೆ ಮಳೆಯಿಂದ ವಿವಿಧ ರೀತಿಯ ಹಾನಿಯಾಗಿದೆ. ಈ ಸಂಬಂಧ ನಷ್ಟದ ಅಂದಾಜು ಮಾಡಿ ಮುಖ್ಯಮಂತ್ರಿ ಅವರು ಹಾಗೂ ಕಂದಾಯ ಸಚಿವರಿಗೆ ವರದಿ ನೀಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು.


ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಬಳಿ ಈಗಾಗಲೇ ೩೦ ಕೋಟಿ ರೂ ಇದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣದ ಕೊರತೆ ಇಲ್ಲ. ಮನೆ ಹಾನಿ ಸಂಬಂಧ ಎನ್‌ಡಿಆರ್‌ಎಫ್ ನಿರ್ದೇಶನದಂತೆ ಕ್ರಮವಹಿಸಲಾಗುವುದು. ಸಂತ್ರಸ್ತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗುವುದು ಎಂದು ಎನ್.ಎಸ್.ಭೋಸರಾಜು ತಿಳಿಸಿದರು.


ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಆಗಬೇಕಿರುವ ಕೆಲಸಗಳನ್ನು ಮುಖ್ಯಮಂತ್ರಿ ಅವರ ಗಮನ ಸೆಳೆಯಲಾಗುವುದು. ಪ್ರವಾಹದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮನೆ ನಿರ್ಮಾಣ ಹಾಗೂ ಜಂಬೂರು ಗ್ರಾಮದಲ್ಲಿ ಅಗತ್ಯ ಮೂಲ ಸೌಲಭ್ಯ ಸೇರಿದಂತೆ ಹಲವು ಯೋಜನೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ವಿವರಿಸಿದರು.


ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿಯೂ ಮಳೆ ಇರುವುದರಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಎದುರಿಸಲು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಸರ್ಕಾರ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನೂ ೨೦೦ ಕೋಟಿ ರೂ ಬಿಡುಗಡೆ ಮಾಡಲಿದೆ ಎಂದು ಸಚಿವರು ತಿಳಿಸಿದರು.


ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಗೆ ಆಗಬೇಕಿರುವ ಕೆಲಸಗಳ ಸಂಬಂಧ ಶಾಸಕರು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿ, ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.


ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಜಂಬೂರು ಗ್ರಾಮದ ನಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುವುದು. ಜಂಬೂರಿನಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಶೀಘ್ರ ಈ ಸಮಸ್ಯೆ ಪರಿಹರಿಸಲಾಗುವುದು. ಒಳಚರಂಡಿ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿಲ್ಲ. ಹಾಗಾಗಿ ಸಮಸ್ಯೆ ಆಗಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಮಂತರ್ ಗೌಡ ತಿಳಿಸಿದರು.


ಜಂಬೂರು ಗ್ರಾಮದಲ್ಲಿ ಇನ್ನೂ ಖಾಲಿ ಇರುವ ಮನೆ ಹಾಗೂ ಸಂತ್ರಸ್ತರಲ್ಲದವರೂ ವಾಸ ಮಾಡುತ್ತಿರುವ ಬಗ್ಗೆ ಗಮನ ಸೆಳೆದಾಗ ಈ ಸಂಬಂಧ ಉಪ ವಿಭಾಗಾಧಿಕಾರಿ ಅವರು ಫಲಾನುಭವಿಗಳ ಪಟ್ಟಿ ಪರಿಶೀಲಿಸಿ ವರದಿ ನೀಡಲಿದ್ದಾರೆ ಎಂದು ಶಾಸಕರು ವಿವರಿಸಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಳೆ ಹಾನಿ ಬಗ್ಗೆ ಮಾಹಿತಿ ನೀಡಿ, ಎನ್‌ಡಿಆರ್‌ಎಫ್ ನಿರ್ದೇಶನದಂತೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಸೀಲ್ದಾರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಲಕ್ಷ್ಮಣ, ಕೆ.ಬಿ.ಶಾಂತಪ್ಪ, ಕೆ.ಎಂ.ಲೋಕೇಶ್, ಯಾಕುಬ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net