

ಮಡಿಕೇರಿ: ೨೦೨೪ರ ಜೂ.೨೧ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿರವರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನ.೬ ರವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-೧೮ ಮತ್ತು ೧೯ ರ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ೨೦೨೩ ನ.೬ಕ್ಕೆ ೧೩೯೫ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ೯೯೨ ಅರ್ಜಿಗಳನ್ನು ಅಂಗೀಕರಿಸಲಾಗಿದೆ. ೭೯ ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿವೆ. ೧೮೯ ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. ೧೩೫ ಅರ್ಜಿಗಳನ್ನು ಬೇರೆ ಮತ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಒಟ್ಟಾರೆ ೩೨೪ ಅರ್ಜಿಗಳನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ೩೫೨೧ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ೩,೦೦೩ ಅರ್ಜಿಗಳು ಅಂಗೀಕಾರವಾಗಿದೆ. ೮೨ ಅರ್ಜಿಗಳು ತಿರಸ್ಕೃತಗೊಂಡಿವೆ. ನೈರುತ್ಯ ಪದವೀಧರರ ಕ್ಷೇತ್ರ ವ್ಯಾಪ್ತಿಗೆ ೨೫೧ ಅರ್ಜಿಗಳನ್ನು ವರ್ಗಾಯಿಸಲಾಗಿದೆ. ೧೮೫ ಅರ್ಜಿಗಳನ್ನು ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಒಟ್ಟಾರೆ ೪೩೬ ಅರ್ಜಿಗಳನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದರು.
ನಮೂನೆ-೧೯ ಮತ್ತು ೧೮ರ ಅರ್ಜಿಗಳನ್ನು ಡಾಟಾ ಎಂಟ್ರಿ ಮಾಡಿ ಭಾರತ ಚುನಾವಣಾ ಆಯೋಗದ ವೇಳಾ ಪಟ್ಟಿ ಅನುಸಾರ ಗುರುವಾರ(ನ.೨೩) ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು ೯೯೨ ಮತದಾರರು ಇದ್ದಾರೆ. ಇವರಲ್ಲಿ ೩೩೬ ಪುರುಷ ಮತದಾರರು ಮತ್ತು ೬೫೬ ಮಹಿಳಾ ಮತದಾರರು ಇದ್ದಾರೆ. ತಾಲೂಕುವಾರು ಗಮನಿಸಿದಾಗ ಮಡಿಕೇರಿ ೨೯೪, ಸೋಮವಾರಪೇಟೆ ೧೨೪, ವಿರಾಜಪೇಟೆ ೧೨೩, ಕುಶಾಲನಗರ ೨೧೧, ಪೊನ್ನಂಪೇಟೆ ೨೪೦ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು ೯೯೨ ಮತದಾರರು ನೋಂದಣಿ ಆಗಿದ್ದಾರೆ ಎಂದರು.
ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು ೩೦೦೩ ಮತದಾರರು ಇದ್ದು, ೧೩೩೧ ಪುರುಷ ಮತದಾರರು, ೧೬೭೧ ಮಹಿಳಾ ಮತದಾರರು ಇದ್ದಾರೆ. ಮಡಿಕೇರಿ ೯೨೮, ಸೋಮವಾರಪೇಟೆ ೬೯೧, ವಿರಾಜಪೇಟೆ ೩೭೭, ಕುಶಾಲನಗರ ೬೨೭, ಪೊನ್ನಂಪೇಟೆ ೩೮೦ ಮತದಾರರು ನೋಂದಣಿ ಆಗಿದ್ದಾರೆ ಎಂದು ವಿವರಿಸಿದರು.
ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಹರು ಇನ್ನೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಗೆ ಅವಕಾಶ ಇದೆ. ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಂಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವವರು ಡಿ.೯ ರೊಳಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಾದ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದರು.
ಸ್ವೀಕೃತವಾಗುವ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಡಿ.೨೫ ರೊಳಗೆ ವಿಲೇವಾರಿ ಮಾಡಿ ಡಿ.೩೦ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ಸಂಬಂಧಪಟ್ಟ ತಾಲೂಕು ಕಚೇರಿಗಳನ್ನು ಸಂಪರ್ಕಿಸಬಹುದು. ಹಾಗೂ ತಿತಿತಿ.ಛಿಞಚಿಡಿಟಿಚಿಣಚಿಞಚಿ.ಞಚಿಡಿ.ಟಿಛಿ.ಟಿ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು.
ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಇದ್ದರು.