

ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಿ ಮಹಿಳೆಯರ ಪ್ರಾಣ ರಕ್ಷಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.
ಮಂಡ್ಯದಲ್ಲಿ ಲೂಟಿ ಮಾಡುವ ಫೈನಾನ್ಸ್ ಸಂಸ್ಥೆಗಳು ದಾಂಗುಡಿ ಇಡುತ್ತಿವೆ. ಕಡು ಬಡವರು, ಮಹಿಳೆಯರು ಇದರಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಮಳವಳ್ಳಿಯಲ್ಲಿ ಮಹಿಳೆಯೊಬ್ಬರು ಫೈನಾನ್ಸ್ ಸಂಸ್ಥೆಯ ಹಾವಳಿ ತಡೆಯದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಫೈನಾನ್ಸ್ ಸಂಸ್ಥೆಗಳ ವಿರುದ್ಧ ಹಲವೆಡೆ ಪ್ರತಿಭಟನೆ ನಡೆದಿದೆ. ಆದ್ದರಿಂದ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿ, ಆಕೆಯ ಕುಟುಂಬದವರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಬಿ.ಆನಂದ್, ಕಾರ್ಯದರ್ಶಿ ಸುರೇಶ್‌ಕುಮಾರ್, ಮೈಸೂರು ವಿಭಾಗೀಯ ಸಂಚಾಲಕ ಅನಿಲ್ಕುಮಾರ್ ಇದ್ದರು.