

ಬೆಳ್ತಂಗಡಿ: ಪತ್ರಿಕೆಗಳಲ್ಲಿ ಸಕಾರಾತ್ಮಕ ವಿಷಯಗಳನ್ನು ಹೇಳುವುದು ಅಗತ್ಯ. ಎಲ್ಲ ಕ್ಷೇತ್ರಗಳಲ್ಲಿ ಇರುವಂತೆ ಪತ್ರಿಕಾ ಕ್ಷೇತ್ರದಲ್ಲಿಯೂ ಸಮಸ್ಯೆಗಳಿದ್ದರೂ ಇರುವ ನ್ಯೂನತೆಗಳ ಮಧ್ಯೆ ಪತ್ರಿಕಾ ಧರ್ಮ ಕಾಯ್ದುಕೊಳ್ಳುವುದು ಮುಖ್ಯ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಆ ನ್ಯೂನತೆಗಳನ್ನು ಸರಿಪಡಿಸುವ ಬಗ್ಗೆ ಗಮನ ಹರಿಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎ. ಕುಮಾರ ಹೆಗ್ಡೆ ಹೇಳಿದರು.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಜಾಲತಾಣಗಳ ಮೂಲಕ ವೇಗವಾಗಿ ಸುದ್ದಿ ಪ್ರಸಾರವಾಗುವ ಪ್ರಸ್ತುತ ಕಾಲದಲ್ಲಿ ಪತ್ರಿಕೆಗಳಿಗೆ ಭವಿಷ್ಯವಿಲ್ಲ ಎನ್ನಲಾಗುತ್ತಿದೆ. ಆದರೆ ವಸ್ತುಸ್ಥಿತಿ ಹಾಗಿಲ್ಲ. ಮುಂದಿನ ಎರಡು ದಶಕಗಳ ಕಾಲ ಕನ್ನಡ ದಿನಪತ್ರಿಕೆಗಳು ಜೀವಂತವಾಗಿರುತ್ತವೆ ಆದರೆ ಅವುಗಳನ್ನು ಉಳಿಸಲು ಹೊಸತನ ಅಗತ್ಯ ಎಂದರು.
ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳಾದ ವಿಷ್ಣು, ಕನ್ನಿಕಾ ಹಾಗೂ ಮದನ್. ಎಂ.ಉಪಸ್ಥಿತರಿದ್ದರು. ಇದೇ ಸಂದರ್ಭ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಕಟಿತ ಬರಹಗಳ 'ಹೊಂಗಿರಣ’ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಸ್ವಾಗತಿಸಿದರು. ಪೂರ್ಣಿಮಾ, ಚರಿಷ್ಮಾ ಪ್ರಾರ್ಥಿಸಿದರು. ಶರಣ್ಯಾ ಜೈನ್
ಅತಿಥಿ ಪರಿಚಯ ನೀಡಿದರು. ಮಾನಸ ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು.