

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದಿಂದ ಕಾಸರಗೋಡು ಜಿಲ್ಲೆಯಲ್ಲಿ ಆಯೋಜಿಸಲಿರುವ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಕನ್ನಡಪರ ಚಟುವಟಿಕೆಗಳಿಗೆ ಜಿಲ್ಲೆಯ ಕನ್ನಡ ಸಂಘಟನೆಗಳ ಸಹಕಾರ ಯಾಚಿಸುತ್ತಿದ್ದೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ್‌ನಾರಾಯಣ್ ತೊಟ್ಟೆತ್ತೋಡಿ ತಿಳಿಸಿದರು.
ಮಂಡ್ಯದಲ್ಲಿ ನಡೆಯಲಿರುವ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಮಾಹಿತಿ ನೀಡಲು ಕಾಸರಗೋಡಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾಸರಗೋಡು ಜಿಲ್ಲೆಯಿಂದ ಹತ್ತು ಮಂದಿ ಪ್ರತಿನಿಧಿಗಳನ್ನು ಕಳುಹಿಸಲು ತೀರ್ಮಾನಿಸಲಾಗಿದೆ. ಜತೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೊ.ಪಿ.ಶ್ರೀಕೃಷ್ಣ ಭಟ್ ಹಾಗೂ ಕವಿಗೋಷ್ಠಿಗೆ ಲಕ್ಷ್ಮೀ ವಿ.ಭಟ್ ಭಾಗವಹಿಸಲಿದ್ದಾರೆ ಎಂದರು.
ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳಿಗೆ ವಿತರಿಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ, ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ವಕೀಲ ಥಾಮಸ್ ಡಿಸೋಜ ಉಪಸ್ಥಿತರಿದ್ದರು.