

ಮೈಸೂರು: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ರೈತರು ಬೆಳೆದಿರುವ ಭತ್ತ, ರಾಗಿ ಬೆಳೆ ಕಟಾವಿಗೆ ಕಂಬೈನ್ಸ್ ಹಾರ್ವೆಸ್ಟರ್ ಯಂತ್ರಗಳ ಬಾಡಿಗೆ ನಿಗದಿ ಮಾಡಲು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ನಡೆಯಿತು.
ಬೇಸಿಗೆ ಹಂಗಾಮಿನಲ್ಲಿ 11612 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆಯಲಾಗಿದ್ದು, ಈಗಾಗಲೇ ಕಟಾವು ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿ ಕಟಾವಿಗೆ ರೈತರು ಕಂಬೈನ್ಸ್ ಹಾರ್ವೆಸ್ಟರ್ ಯಂತ್ರಗಳನ್ನು ಬಾಡಿಗೆಗೆ ಪಡೆದು ಒಕ್ಕಣೆ ಮಾಡು ವುದು ವಾಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಭೆ ನಡೆಸಲಾಯಿತು.
ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗರಿಷ್ಠ ಗಂಟೆಗೆ 2500 ರೂ., ಟೈರ್ (ಗ್ರಿಪ್) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2000 ರೂ., ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 1800 ರೂ. ಗಳಂತೆ ಹಾಗೂ ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2900 ರೂ. ನಿಗದಿ ಮಾಡಲಾಗಿದೆ.
ಸಭೆಯಲ್ಲಿ ರೈತ ಮುಖಂಡರು, ಪೊಲೀಸ್ ಅಧಿಕಾರಿಗಳು, ಆರ್‌ಟಿಒ ಅಧಿಕಾರಿಗಳು ಹಾಗೂ ಇತರರು ಇದ್ದರು.