ರಾಜ್ಯ ಸರ್ಕಾರ ದಿವಾಳಿಯಾಗಿರುವುದರಿಂದ ಬೆಲೆ ಏರಿಕೆ

JS
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಾಲು, ವಿದ್ಯುತ್, ಕುಡಿಯುವ ನೀರು ಹೀಗೆ ಒಂದಲ್ಲ ಒಂದರ ಬೆಲೆ ಏರಿಕೆ ಮಾಡುತ್ತಿರುವುದನ್ನು ನೋಡಿದರೆ ರಾಜ್ಯ ಸರ್ಕಾರ ದಿವಾಳಿಯಾಗಿರುವುದಕ್ಕೆ ಉದಾಹರಣೆಯಾಗಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ 50ರಿಂದ 60 ಸಾವಿರ ಕೋಟಿ ರೂ. ವ್ಯಯ ಮಾಡುತ್ತಿದೆ. ಇದರಿಂದ ಆಡಳಿತ ನಡೆಸುವುದು ಕಷ್ಟವಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಒಂದಲ್ಲ ಒಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದು ಕಾಂಗ್ರೆಸ್ ಸರ್ಕಾರದ ಪ್ರವೃತ್ತಿಯಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಅವರ ಮನೆಗೆ ಭೇಟಿ ನೀಡಿರುವುದಕ್ಕೆ ಅಪಾರ್ಥ ಕಲ್ಪಿಸಿ ಕಾಂಗ್ರೆಸ್ ಟೀಕೆ ಮಾಡಿರುವುದು ಸರಿಯಲ್ಲ. ಇದು ನಿರೀಕ್ಷೆಗೂ ಮೀರಿದ ಕೆಳ ಹಂತದ ಟೀಕೆಯಾಗಿದೆ. ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಎಷ್ಟು ಕೆಳ ಹಂತಕ್ಕೆ ಹೋಗಿದೆ ಎಂಬುದನ್ನು ಸೂಚಿಸುತ್ತದೆ. ಸಾಂವಿಧಾನಿಕ ಹುದ್ದೆಯಲ್ಲಿ ಇರುವವರ ವೈಯಕ್ತಿಕ ಸಂಬಂಧಗಳು, ಪರಸ್ಪರ ಗೌರವ ಕೊಡುವುದರ ಬಗ್ಗೆ ಟೀಕೆ ಟಿಪ್ಪಣಿ ಮಾಡಬಾರದು. ನಾನು ಸಹ ಎಷ್ಟೋ ನ್ಯಾಯಾಧೀಶರ ಮನೆಯ ಮದುವೆ, ಇನ್ನಿತರ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ನಮ್ಮ ಕುಟುಂಬದ ಕಾರ್ಯಕ್ರಮಗಳಿಗೆ ನ್ಯಾಯಾಂಗ ಇಲಾಖೆಯವರು ಬಂದಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕೋಮು ಗಲಭೆಯಂಥ ಘಟನೆಗಳು ಹೆಚ್ಚುತ್ತಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯೇ ಮೂಲ ಕಾರಣ. ನಾಗಮಂಗಲ ಘಟನೆಯಲ್ಲಿ ಸಂತ್ರಸ್ಥರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ರೀತಿ ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳುತ್ತ ಹೋದರೆ ರಾಜ್ಯ ಸರ್ಕಾರದ ವಿರುದ್ಧ ಜನ ದಂಗೆ ಏಳಲಿದ್ದಾರೆ ಎಂದರು.

ಶಾಸಕ ಮುನಿರತ್ನ ಬಂಧನ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಿಟ್ಟು ಹೊರಗೆ ಬಂದು ಬಿಜೆಪಿ ಪರವಾಗಿ ಕೆಲಸ ಮಾಡಿದಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಮುನಿರತ್ನ ಅವರೇ ಹೇಳಿದ್ದಾರೆ. ಸಂಭಾಷಣೆಯ ವಿಡಿಯೋ ತಿರುಚಲಾಗಿದೆ ಎಂದೂ ಸಹ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net