

ಮಂಡ್ಯ: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಅನುದಾನ ನೀಡಲಾಗುತ್ತಿದೆ. ಆದ್ದರಿಂದ ಮಕ್ಕಳ ದಾಖಲಾತಿ ಹೆಚ್ಚಾಗುವ ರೀತಿ ಅಧಿಕಾರಿಗಳು ಚಿಂತಿಸಿ ಕಾರ್ಯನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 0-5 ಮಕ್ಕಳ ದಾಖಲಾತಿ ಇರುವ ಶಾಲೆಯಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ದೊರಕುವುದು ಕಷ್ಟಕರವಾಗಿರುತ್ತದೆ. ಆದ್ದರಿಂದ ಇಂತಹ ಶಾಲೆಗಳನ್ನು ಗುರುತಿಸಿ ಜನಪ್ರತಿನಿಧಿಗಳು ಹಾಗೂ ಪಾಲಕರೊಂದಿಗೆ ಚರ್ಚಿಸಿ ಮಕ್ಕಳನ್ನು ಹತ್ತಿರದ ಬೇರೆ ಶಾಲೆಗೆ ವರ್ಗಾಯಿಸಿದರೆ, ಎರಡು ಶಾಲೆಗೆ ಸೇರಿದಂತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬಹುದು. ಮಾತ್ರವಲ್ಲದೆ ಮಕ್ಕಳು ಶಾಲೆಗೆ ಹೋಗಿ ಬರಲು ವೆಚ್ಚದ ವ್ಯವಸ್ಥೆ ಸಹ ಮಾಡಲಾಗುವುದು. ಈ ಬಗ್ಗೆ ಚಿಂತಿಸಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಷರತ್ತು ಹಾಗೂ ನಿಯಮಗಳನ್ನು ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
ಸರ್ವೇ ಹಾಗೂ ಎಸ್‌ಎಟಿಎಸ್ ಅಂಕಿ ಅಂಶಗಳ ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಿನ ವ್ಯತ್ಯಾಸವಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಕ್ಕೆ ಹೋದ ಮಕ್ಕಳು ಯಾವ ಶಾಲೆಯಲ್ಲಿ ದಾಖಲಾತಿ ಪಡೆದುಕೊಂಡಿದ್ದರೆ ಎಂದು ಮಾಹಿತಿ ಪಡೆದುಕೊಂಡು 15 ದಿನದೊಳಗಾಗಿ ವರದಿ ನೀಡಬೇಕು. ಒಟ್ಟಾರೆ ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು ಎಂದರು.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶೌಚಗೃಹಗಳಿದ್ದರೂ, ಬಳಕೆಗೆ ಯೋಗ್ಯವಾಗಿಲ್ಲ. ಇದರಿಂದ ಮಕ್ಕಳಿಗೆ ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ದೊಡ್ಡ ಸಮಸ್ಯೆಯಾಗಿದೆ. ಪರಿಣಾಮ ಮಕ್ಕಳ ದಾಖಲಾತಿಯ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ತುರ್ತು ಕ್ರಮ ವಹಿಸಬೇಕೆಂದು ಸಲಹೆ ನೀಡಿದರು. ಇದಕ್ಕೆ ಸ್ಪಂದಿಸಿದ ಮಧು ಬಂಗಾರಪ್ಪ, ಜಿಲ್ಲೆಯಲ್ಲಿರುವ ಶಾಲೆಗಳಿಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಸಣ್ಣ ಪುಟ್ಟ ದುರಸ್ತಿ ಕೆಲಸಗಳಿದ್ದಲ್ಲಿ ಸರಿಪಡಿಸಿ ಎಂದು ಸೂಚನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು. ಶಿಕ್ಷಕರು ಸಹ ಓದಿನಲ್ಲಿ ಹಿಂದಿರುವ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ತರಬೇತಿ ನೀಡಿ ಮುಂದೆ ತರಲು ಹೆಚ್ಚು ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಮೂಲ ಸೌಕರ್ಯ ಕೊರತೆ ಇರುವ ಶಾಲೆಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಶಾಲೆಗೆ ದಾಖಲಾಗಿ ಕಲಿಕೆಯಿಂದ ದೂರ ಉಳಿದ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಲು ಸರ್ಕಾರ ವಿಶೇಷವಾದ ರೂಪರೇಷೆಗಳನ್ನು ಸಿದ್ಧಪಡಿಸಬೇಕು. ಕೆಲ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕೆಲವಡೆ ಸೌಲಭ್ಯ ಇದ್ದರೂ, ಅದರ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ. ಅಂತೆಯೇ ಕೆಲವು ಶಾಲೆಗಳಲ್ಲಿ ಅಡುಗೆ ಕೆಲಸ, ಶೌಚಗೃಹ ಸ್ವಚ್ಛಗೊಳಿಸುವುದನ್ನು ಶಿಕ್ಷಕರೆ ಮಾಡುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇವುಗಳನ್ನು ಸರಿಪಡಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಸಭೆಯಲ್ಲಿ ಶಾಸಕರಾದ ರವಿಕುಮಾರ್ ಗಣಿಗ, ರಮೇಶ ಬಂಡಿಸಿದ್ದೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್‌ಸಿಂಗ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ.ಕಾವೇರಿ, ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇತರರಿದ್ದರು.