

ವಿಜಯವಾಣಿ ಸುದ್ದಿಜಾಲ ಧಾರವಾಡ
ಆರೋಗ್ಯದಲ್ಲಿ ದುಷ್ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಮೇಲೆ ನಿಯಂತ್ರಣವಿರಬೇಕು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪದ್ಧತಿ ಮತ್ತು ಜೀವನಶೈಲಿ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ವಸ್ತುಗಳನ್ನು ಹೆಚ್ಚು ಬಳಸುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೆಚ್ಚಿನ ಜನರು ರಾಸಾಯನಿಕ ಬಳಸಿದ ಆಹಾರ ಸೇವಿಸಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಆಹಾರ ಸೇವಿಸಬಾರದು. ಹಣ್ಣು, ತರಕಾರಿ, ಸೊಪ್ಪು ಹಾಗೂ ಸಿರಿಧಾನ್ಯಗಳನ್ನು ಸೇವಿಸಿ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಕೆ. ತನಜುಜಾ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ಲಲಿತಾ ಹಾವೇರಿ, ಪ್ರಶಾಂತ ದೇವರಮನಿ, ಮುತ್ತಣ್ಣ ಸಿ.ಎ., ಡಾ. ಉಮಾ ಬಳ್ಳೊಳ್ಳಿ, ಡಾ. ರಾಜೇಶ್ವರಿ, ಅಂಗನವಾಡಿ ಮೇಲ್ವಿಚಾರಕಿಯರು, ಆಶಾ ಕಾರ್ಯಕರ್ತೆಯರು, ಇತರರು ಇದ್ದರು.
ಡಾ. ಕಮಲಾ ಬೈಲೂರು ಸ್ವಾಗತಿಸಿದರು. ಸುಜಾತಾ ಮುರಾರಿ ನಿರೂಪಿಸಿದರು. ಶಾರದಾ ನಾಡಗೌಡರ ವಂದಿಸಿದರು.