

ಸಿದ್ದಾಪುರ: ಕಳೆದ 58 ವರ್ಷಗಳಿಂದ ಸಿದ್ದಾಪುರ ಸುತ್ತಮುತ್ತಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಿದ್ದಾಪುರ ಪ್ರೌಢಶಾಲೆ ಆಡಳಿತ ಮಂಡಳಿಯ ಕಾಳಜಿ ಶ್ಲಾಘನೀಯ ಎಂದು ಸಿಎಂ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.
ಪ್ರೌಢಶಾಲಾ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಶಾಲೆಯ 58ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿದ್ದ್ದಾಪುರ ಸುತ್ತಮುತ್ತಲ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 58 ವರ್ಷಗಳ ಹಿಂದೆಯೇ ಶಾಲೆಯನ್ನು ಪ್ರಾರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಾಲೆಯು ತನ್ನದೇ ಆದ ಪಾತ್ರವನ್ನು ನಿರ್ವಹಿಸಿದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ. ಕನ್ನಡ ಶಾಲೆಯನ್ನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಲಹೆ ನೀಡಿದ ಶಾಸಕರು, ಅನುದಾನಿತ ಶಾಲೆಗಳನ್ನು ಅಭಿವೃದ್ಧಿಯೊಂದಿಗೆ ಮುನ್ನಡೆಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪೊಲೀಸ್ ಸಹಾಯಕ ವರಿಷ್ಠಾಧಿಕಾರಿ ಸುಂದರ್‌ರಾಜ್ ಮಾತನಾಡಿ, ಹೆಚ್ಚವು ಓದುವ ಮೂಲಕ ಅಧಿಕ ಜ್ಞಾನವನ್ನು ಬೆಳೆಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತ ಅದೆಷ್ಟೋ ಮಂದಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ದುಶ್ಚಟಗಳಿಂದ ದೂರವಿದ್ದು ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳಾಗಿ ಬದುಕು ರೂಪಿಸಿಕೊಳ್ಳಬೇಕು ಎಂದರು.
ಸಿದ್ದಾಪುರ ಪ್ರೌಢಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪಿ.ಸಿ.ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸರ್ಕಾರಿ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರೇಮ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಡಿವೈಎಸ್‌ಪಿ ಮಹೇಶ್, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್.ರಾಜೇಶ್, ಸಿಆರ್‌ಪಿಎನ್‌ಎಸ್ ಅಶೋಕ್ ಇತರರಿದ್ದರು.
ಇದೇ ಸಂದರ್ಭ ವಿವಿಧ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿ ಕಾರ್ಯಕ್ರಮ ಗಮನ ಸೆಳೆಯಿತು.