

ಶಿವಮೊಗ್ಗ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಬೆಂಬಲಿಗರು ನಡೆಸಿರುವ ದೌರ್ಜನ್ಯ ಖಂಡಿಸಿ ಮೇ 24ರಂದು ಪ್ರಿಯಾಂಕ್ ಹಠಾವೋ, ಕಲಬುರಗಿ ಬಚಾವೋ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕಲಬುರಗಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಛಲವಾದಿ ನಾರಾಯಣಸ್ವಾಮಿ ಅವರಿಗೆ ಪ್ರಿಯಾಂಕ್ ಖರ್ಗೆ ಬೆಂಬಲಿಗರು ನಾಲ್ಕೈದು ತಾಸು ೇರಾವ್ ಹಾಕಿ ಅವರ ಮೇಲೆ ಹಲ್ಲೆಗೆ ಯತ್ನಿಸಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಪ್ರಿಯಾಂಕ್ ಖರ್ಗೆ ಮತ್ತು ಅವರ ಬೆಂಬಲಿಗರು ಕಲಬುರಗಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಕಾರ್ಯಕ್ಕೆ ಮುಂದಾಗಿದ್ದಾರೆ. ಪ್ರತಿಪಕ್ಷ ನಾಯಕನ ಮೇಲೆ ಈ ರೀತಿ ಹಲ್ಲೆಗೆ ಮುಂದಾದರೆ ಜನಸಾಮಾನ್ಯರ ಪಾಡೇನು? ರಾಜ್ಯದಲ್ಲಿ ಇಂತಹ ಗೂಂಡಾ ವರ್ತನೆ ನಿರಂತರವಾಗಿ ನಡೆಯುತ್ತಿದೆ. ಸಂವಿಧಾನದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ ಸ್ವತಃ ಸಂವಿಧಾನದ ಉಲ್ಲಂಘಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರಿಯಾಂಕ್ ಖರ್ಗೆ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಮೆಚ್ಚಿಸುವ ಸಲುವಾಗಿ ಅವರು ಈ ಮಟ್ಟಕ್ಕೆ ಇಳಿದಿದ್ದಾರೆ. ಮೇ 24ರಂದು ನಡೆಯುವ ಆಂದೋಲನದಲ್ಲಿ ರಾಜ್ಯದ ನಾಯಕರು ಭಾಗವಹಿಸಲಿದ್ದಾರೆ. ಎಲ್ಲ ಜಿಲ್ಲಾ ಕೇಂದ್ರಗಳಿಂದಲೂ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ, ಪ್ರಮುಖರಾದ ದೇವರಾಜ್, ಮಾಲತೇಶ್, ಅಣ್ಣಪ್ಪ, ಶಿವರಾಜ್ ಸುದ್ದಿಗೋಷ್ಠಿಯಲ್ಲಿದ್ದರು.