ಗ್ರಾಪಂ ಮಟ್ಟದಲ್ಲೇ ಸಮಸ್ಯೆಗಳಿಗೆ ಪರಿಹಾರ

09-GPT-3
Published on

ಗುಂಡ್ಲುಪೇಟೆ: ತಾಲೂಕಿನ ಸೋಮಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ಅರ್ಜಿ ಸಲ್ಲಿಸಿದರು.


ಗ್ರಾಮ ಪಂಚಾಯಿತಿಗಳಲ್ಲಿ ಪೌತಿಖಾತೆ ಹಾಗೂ ಇ-ಸ್ವತ್ತು ಮಾಡಿಕೊಡಲು ಸಿಬ್ಬಂದಿ ವಿಳಂಬ ಮಾಡುತ್ತಿದ್ದಾರೆ. ನಮ್ಮ ಬೀದಿಗಳಿಗೆ ಚರಂಡಿಗಳು, ಸಿಸಿ ರಸ್ತೆ ನಿರ್ಮಿಸಿ, ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಣಿ ಆಗುತ್ತಿಲ್ಲ. ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಬಿಲ್ ವಿಳಂಬ ಮಾಡಲಾಗುತ್ತಿದೆ ಎಂಬುದು ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.


ಬಳಿಕ ಶಾಸಕ ಗಣೇಶ್‌ಪ್ರಸಾದ್ ಮಾತನಾಡಿ, ತಾಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಸಾಧ್ಯವಾದ ಮಟ್ಟಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗುವುದು. ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಹಸೀಲ್ದಾರ್ ರಮೇಶ್‌ಬಾಬು, ತಾಪಂ ಇಒ ರಾಮಲಿಂಗಯ್ಯ, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಬಿಇಒ ರಾಜಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್, ಎಪಿಎಂಸಿ ಸದಸ್ಯ ಶಿವನಾಗಪ್ಪ, ತಾಪಂ ಮಾಜಿ ಅಧ್ಯಕ್ಷ ಎಸ್.ಎಸ್.ಮಧುಶಂಕರ್, ಸದಾಶಿವಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net