ಫಲಾನುಭವಿಗಳ ಆಯ್ಕೆ ನಿಷ್ಪಕ್ಷಪಾತವಾಗಿರಬೇಕು

kh
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 2500 ನಿವೇಶನಗಳನ್ನು ಸಿದ್ದಪಡಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡಬೇಕು ಎಂದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಸೂಚಿಸಿದರು.

ದೇವನಹಳ್ಳಿ ತಾಲೂಕು ಜಿಲ್ಲಾಡಳಿತದ ಭವನದಲ್ಲಿನ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ನಿವೇಶನ ಹಂಚಿಕೆಯಲ್ಲಿ ಯಾವುದೇ ತಾಲೂಕಿಗೆ ತಾರತಮ್ಯ ಮಾಡುವುದಿಲ್ಲ, ಪ್ರತಿ ತಾಲೂಕಿನಲ್ಲೂ ಅರ್ಹರಿಗೆ ನಿವೇಶನ ಹಂಚಿಕೆ ಮಾಡುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ ಆದ್ದರಿಂದ ಅಧಿಕಾರಿಗಳು ಯಾವುದೇ ಅಕ್ರಮಕ್ಕೆ ಅವಕಾಶ ನೀಡದೆ ಯಾವುದೇ ಪ್ರಭಾವಕ್ಕೆ ಒಳಗಾಗದೆ ಅರ್ಹ ಲಾನುಭವಿಗಳ ಪಟ್ಟಿ ತಯಾರಿಸಬೇಕು, ಆಶ್ರಯ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು ಎಂದರು. ಈಗಾಗಲೇ ಜಿಲ್ಲಾದ್ಯಂತ 288 ಎಕರೆ ಸರ್ಕಾರಿ ಜಮೀನು ಗುರುತಿಸಿ ನಿವೇಶನ ಸಿದ್ದಪಡಿಸಲಾಗುತ್ತಿದೆ. ದೇವನಹಳ್ಳಿ ತಾಲೂಕಿನಲ್ಲಿ 62 ಎಕರೆ ಸರ್ಕಾರಿ ಜಮೀನಿನಲ್ಲಿ 557 ನಿವೇಶನಗಳನ್ನು ಸಿದ್ದಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಜತೆಗೆ ನಿವೇಶನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಆದಷ್ಟು ಬೇಗ ತಾಲೂಕಿನಲ್ಲಿ 2500 ನಿವೇಶನ ಸಿದ್ದಪಡಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಂಜುರಾತಿ ಸಿಕ್ಕಿದೆ: ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ 2500 ಮನೆಗಳನ್ನು ನೀಡುವ ಗುರಿ ಹೊಂದಿದ್ದು, ವಸತಿ ಸಚಿವರಿಂದ ಮಂಜೂರಾತಿ ಸಿಕ್ಕಿದೆ. ಶೀಘ್ರ ವಸತಿ ರಹಿತ ಅರ್ಹರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು, ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಯಾವುದೇ ಜಾತಿ, ಪಕ್ಷವನ್ನು ನೋಡದೇ ನಿಷ್ಪಕ್ಷಪಾತದಿಂದ ಆಯ್ಕೆ ಮಾಡಿ. ಸ್ಥಳೀಯ ಹಂತದಲ್ಲಿ ಯಾವುದೇ ಸಮಸ್ಯೆ ಇರಲಿ ಯಾರ ಒತ್ತಡಕ್ಕೂ ಮಣಿಯದೆ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಅಧಿಕಾರಿಗಳ ಜವಾಬ್ದಾರಿ: ಪೋಡಿ ಮುಕ್ತ ಜಿಲ್ಲೆಗೆ ಮಾಡುವ ನಿಟ್ಟಿನಲ್ಲಿ ಪೋಡಿ ಅಭಿಯಾನದಲ್ಲಿ ಗ್ರಾಮಾಂತರ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಅದನ್ನು ಹಾಗೇ ಮುಂದುವರೆದುಕೊಂಡು ಹೋಗುವ ಜವಾಬ್ದಾರಿ ಅಧಿಕಾರಿಗಳ ಕೈಯಲ್ಲಿದೆ. ಮೊದಲು ಪೋಡಿ ಮುಕ್ತ ಗ್ರಾಮಗಳಾಗಬೇಕು. ಹಾಗಾಗಿ ಕಂದಾಯ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಬೇಕು ಎಂದು ಕೆ.ಎಚ್.ಮುನಿಯಪ್ಪ ಸೂಚಿಸಿದರು. ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ನೋಡಿಕೊಂಡು ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು, ಕೆಲವು ಪಂಚಾಯಿತಿ ಅಧ್ಯಕ್ಷರ ದೂರಿನಂತೆ ಜೆಜೆಎಂ ಕಾಮಗಾರಿಯಿಂದ ಗ್ರಾಮಗಳಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂಬ ಮಾಹಿತಿ ಇದೆ, ಅಗೆದಿರುವ ರಸ್ತೆಗಳನ್ನು ಶೀಘ್ರ ಮುಚ್ಚಬೇಕು. ಕಳೆದ ಸಾಲಿನಲ್ಲಿ ಶುರುವಾದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಈ ಬಗ್ಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.

ಮೂಲಸೌಕರ್ಯ ಇರಲಿ: ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಉತ್ತಮ ಫಲಿತಾಂಶ ಬರಲು ಅಧಿಕಾರಿಗಳು, ಶಿಕ್ಷಕರು ಶ್ರಮಿಸಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ, ಹಾಸ್ಟೆಲ್ ಗಳಲ್ಲಿ ಅವಶ್ಯಕ ಮೂಲ ಹಾಗೂ ಇನ್ನಿತರ ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಬೇಕು ಎಂದು ಸಚಿವರು ತಿಳಿಸಿದರು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ, ತೋಟಗಾರಿಕೆ ಚಟುವಟಿಕೆಗಳು ಶುರು ಆಗುತ್ತವೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net