ಸರ್ಕಾರಿ ಸೌಲಭ್ಯ ಜನರಿಗೆ ತಲುಪಿಸಿ

muniyappa
ದೇವನಹಳ್ಳಿ ತಾಲೂಕು ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಇತರರಿದ್ದರು.
Published on

*ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ
*ಪ್ರಗತಿ ಪರಿಶೀಲನಾ ಸಭೆ, ಜನಸ್ಪಂದನ ಕಾರ್ಯಕ್ರಮ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಎಚ್ಚರಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆ, ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಭಿವೃದ್ಧಿಪರ ಕಾರ್ಯಕ್ರಮಗಳಿಗಾಗಿ ಸರ್ಕಾರವು ಹಲವಾರು ಯೋಜನೆ ಜಾರಿಗೊಳಿಸಿದ್ದು, ಜನಸಾಮಾನ್ಯರಿಗೆ ಸೌಲಭ್ಯಗಳು ಪಾರದರ್ಶಕವಾಗಿ ದೊರಕಿಸಿಕೊಡಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯನ್ನು ಪೋಡಿಮುಕ್ತವಾಗಿ ಮಾಡುವ ಗುರಿ ಹೊಂದಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಸ್ಮಶಾನ ಭೂಮಿ ಸಮಸ್ಯೆ, ಸ್ಮಶಾನ ಸಂಪರ್ಕಿಸುವ ರಸ್ತೆ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆ ಬಗೆಹರಿಸಬೇಕು ಎಂದರು.
ಬಡವರಿಗೆ ಮನೆ ಕಲ್ಪಿಸಲು, ನಿವೇಶನ ಹಂಚಲು ಕ್ರಮ ವಹಿಸಲಾಗುವುದು. ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ನಿವೇಶನಕ್ಕಾಗಿ ಜಾಗ ಗುರುತಿಸಲಾಗಿದೆ. ಶೀಘ್ರವೇ ನಿವೇಶನಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಪ್ರತಿವರ್ಷ ಅರಣ್ಯ ಇಲಾಖೆಯವರು ಸಾವಿರಾರು ಸಸಿ ನೆಡುತ್ತಾರೆ. ಆದರೆ ಅದನ್ನು ಪೋಷಿಸಿ ಬೆಳೆಸಲು ಗಮನಹರಿಸುತ್ತಿಲ್ಲ. ಸಸಿಗಳನ್ನು ಎಲ್ಲೆಂದರಲ್ಲಿ ನೆಡಬಾರದು. ಬದಲಾಗಿ ಗ್ರಾಪಂಮಟ್ಟದಲ್ಲಿ ಸರ್ಕಾರಿ ಜಮೀನುಗಳಲ್ಲಿ ಹಾಗೂ ಗ್ರಾಮಠಾಣೆಗಳಲ್ಲಿ ನೆಡಬೇಕು. ಸಸಿ ನೆಟ್ಟ ನಂತರ ಕನಿಷ್ಠ 3 ವರ್ಷಗಳವರೆಗೆ ಪೋಷಿಸಿ ಬೆಳೆಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ಸಮಸ್ಯೆ, ಭೂ ಸ್ವಾಧೀನ ಪರಿಹಾರ ಹಣ, ಘನತ್ಯಾಜ್ಯ ವಿಲೇವಾರಿ, ಹಕ್ಕುಪತ್ರ ವಿವರಣೆ, ನಿವೇಶನ ಹಂಚಿಕೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಶೀಘ್ರ ಕ್ರಮವಹಿಸಿ ಸಾರ್ವಜನಿಕರ ಸಮಸ್ಯೆ ಪರಿಹರಿಸಲಾಗುವುದು ಎಂದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net