

ಮಡಿಕೇರಿ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಕೆಲವು ಇಲಾಖೆಗಳು ಭೌತಿಕ ಪ್ರಗತಿ ಸಾಧಿಸಿದ್ದು, ಆರ್ಥಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ಸೂಚಿಸಿದರು. ವೈಯಕ್ತಿಕ ಫಲಾನುಭವಿಗಳು ಆಯ್ಕೆ ಮಾಡದಿದ್ದಲ್ಲಿ, ಕೂಡಲೇ ಆಯ್ಕೆ ಮಾಡಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು. ಬಡವರಿಗಾಗಿ ಮೀಸಲಿಡುವ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಆಶಯಗಳನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಇಲಾಖೆ ಕಾರ್ಯಕ್ರಮಗಳು ನಿಗದಿಯಂತೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಎನ್.ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ. ಚಂದ್ರಕಾಂತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜು ಮತ್ತಿತರರು ಇದ್ದರು.