ಶೀಘ್ರವೇ ಬಾಕಿ ಇರುವ ಬಿಲ್ ಪಾವತಿಗೊಳಿಸಿ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಸೂಚನೆ

Progress review meeting Mandya
Published on

ಮಂಡ್ಯ: ಸ್ಥಳೀಯ ಶಾಸಕರ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ. ಜತೆಗೆ ಯಾವುದೇ ಬಿಲ್ ಬಾಕಿ ಉಳಿಸಿಕೊಳ್ಳಬೇಡಿ. ನಿಗದಿಯಾಗಿರುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಂಡು ಶೇ.100 ರಷ್ಟು ಸಾಧನೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದೆ. ಹಣವನ್ನು ಸಮರ್ಪಕವಾಗಿ ಬಳಸಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಂದರು.

ಕೆಎಲ್ಎಲ್ಎಡಿಎಸ್‌ಗೆ ಸಂಬಂಧಪಟ್ಟ ಕಾಮಗಾರಿ ಎರಡು ವರ್ಷದಿಂದ ಪ್ರಗತಿ ಹಂತದಲ್ಲಿದೆ. ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಿ. ಹಳೆಯ ಕಾಮಗಾರಿ ಬಿಲ್ಗಳನ್ನು ಒಂದು ವಾರದೊಳಗೆ ಪಾವತಿ ಮಾಡಿ. ಮಂಡ್ಯ ತಾಲೂಕಿನಲ್ಲಿ ಅನೇಕ ಕಾಮಗಾರಿಗಳು ಪೂರ್ಣಗೊಳ್ಳದೆ ಉಳಿದಿದ್ದು, ಅಧಿಕಾರಿಗಳು ಅದಕ್ಕೆ ಸೂಕ್ತ ಉತ್ತರವನ್ನು ವಾರದೊಳಗೆ ನೀಡಬೇಕು. ಜತೆಗೆ ಮುಂದಿನ ಸಭೆಯಲ್ಲಿ ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದರು.

ಕಾಮಗಾರಿ ಪೂರ್ಣಗೊಳಿಸಲು ತಾಂತ್ರಿಕ, ಸ್ಥಳೀಯ ಅಥವಾ ಸ್ಥಳದ ತೊಂದರೆ ಇದ್ದರೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಿ. ಹಿಂದೆ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ. ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜಾರಿಗೊಳಿಸಲಾಗುವುದು. ಏಜೆನ್ಸಿಗಳೊಂದಿಗೆ ಇಲಾಖಾ ಅಧಿಕಾರಿಗಳು ಸಮನ್ವಯ ಸಾಧಿಸಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಕೋಮಲ್ಕುಮಾರ್, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಚೇತನ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net