

ಮಂಡ್ಯ: ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಕರ್ತವ್ಯ. ಈ ಯೋಜನೆಗಳಿಗಾಗಿ ಬಜೆಟ್‌ನಲ್ಲಿ ಸಾಕಷ್ಟು ಅನುದಾನ ಮೀಸಲಿಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಫಲಾನುಭವಿಗಳ ಹೆಸರು ಬಿಟ್ಟು ಹೋಗಿದ್ದರೆ ಆದಷ್ಟು ಬೇಗ ಅಂತಹವರನ್ನು ಸೇರ್ಪಡೆ ಮಾಡುವ ಕೆಲಸವಾಗಬೇಕು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದಿರುವವರ ಮೇಲೆ ಕ್ರಮ ಕೈಗೊಳ್ಳಿ. ಪಡಿತರ ಅಂಗಡಿಗಳಲ್ಲಿ ಯಾವುದೇ ರೀತಿಯ ಅನ್ಯಾಯ ನಡೆಯದಂತೆ ನಿಗಾ ವಹಿಸಬೇಕು. ಈ ಯೋಜನೆಯಡಿ ಸಾರ್ವಜನಿಕರಿಗೆ ನೀಡುವ ಪಡಿತರದ ತೂಕದಲ್ಲಿ ಮೋಸವಾಗಬಾರದು. ಅಧಿಕಾರಿಗಳು ಪಡಿತರ ವಿತರಣಾ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕ ಹಾಗೂ ಪಾರದರ್ಶಕವಾಗಿ ತಲುಪಿಸಲು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಅದಾಲತ್ ಮಾಡಬೇಕಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 2023 ಆಗಸ್ಟ್‌ನಿಂದ 2024 ಜೂನ್‌ವರೆಗೆ 4,50,734 ಫಲಾನುಭವಿಗಳಿದ್ದಾರೆ. ಇದರಲ್ಲಿ 4,41,952 ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಯೋಜನೆಗಾಗಿ ಸರ್ಕಾರದಿಂದ ಈಗಾಗಲೇ 949.82 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ಶೇ.98.05 ಪ್ರಗತಿ ಸಾಧಿಸಲಾಗಿದೆ. ಯೋಜನೆಯಡಿ ಜೂನ್‌ವರೆಗೆ ಹಣ ಪಾವತಿಯಾಗಿದೆ. ಕೆಲ ತಾಂತ್ರಿಕ ತೊಂದರೆಯಿಂದಾಗಿ ಕಳೆದೆರಡು ತಿಂಗಳಿಂದ ಪಾವತಿಯಾಗಿಲ್ಲ. ಮುಂದಿನ ದಿನಗಳಲ್ಲಿ ಉಳಿದ 2 ಕಂತಿನ ಹಣ ಬಿಡುಗಡೆಯಾಗುವುದು ಎಂದರು.
ಜಿಲ್ಲೆಯಲ್ಲಿ 2023 ಜುಲೈನಿಂದ 2024 ಜೂನ್‌ವರೆಗೆ ಒಟ್ಟು 4,43,376 ಫಲಾನುಭವಿಗಳು ಅನ್ನಭಾಗ್ಯ ಯೋಜನೆ ಸೌಲಭ್ಯ ಪಡೆಯುತ್ತಿದ್ದು, 287.13 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ 2023 ಜೂನ್‌ನಿಂದ 2024 ಆಗಸ್ಟ್‌ವರೆಗೆ 474 ವಾಹನಗಳು ಸಂಚಾರ ಮಾಡುತ್ತಿದ್ದು, ಪ್ರತಿದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಶಕ್ತಿ ಯೋಜನೆ ಪೂರ್ವದಲ್ಲಿ 204724 ಪ್ರಯಾಣ ಮಾಡುತ್ತಿದ್ದರು. ಆದರೆ ಶಕ್ತಿ ಯೋಜನೆ ನಂತರ ಒಟ್ಟು 2,82,030 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ದಿನ ಒಟ್ಟು 1,84,416 ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಯೋಜನೆಯಡಿ 830.78 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಸರ್ಕಾರದಿಂದ ಈಗಾಗಲೇ 20,939.84 ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ ಎಂದು ವಿವರಿಸಿದರು.
2024ರ ಆಗಸ್ಟ್‌ವರೆಗೆ 5,07,384 ಫಲಾನುಭವಿಗಳು ಗೃಹಜ್ಯೋತಿ ಯೋಜನೆಗೆ ಅರ್ಹರಾಗಿದ್ದಾರೆ. ಈ ಪೈಕಿ 4,80,670 ಗ್ರಾಹಕರು ನೋಂದಣಿಯಾಗಿದ್ದು, ಉಳಿದವರನ್ನು ನೋಂದಣಿ ಮಾಡಿಸಲು ಕ್ರಮ ವಹಿಸಬೇಕು. ಇನ್ನು ಯುವ ನಿಧಿ ಯೋಜನೆಯಡಿ ಆಗಸ್ಟ್ ಅಂತ್ಯಕ್ಕೆ ಒಟ್ಟು 7,975 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. ಇದಕ್ಕೆಂದು 2,38,39,500 ರೂ ಅನುದಾನ ಬಳಕೆಯಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಪ್ರಗತಿ ಪರಿಶೀಲನೆಯನ್ನು ಪ್ರತಿ ಕೆಡಿಪಿ ಸಭೆಯಲ್ಲಿ ಚರ್ಚಿಸಬೇಕೆಂದು ತಿಳಿಸಲಾಗಿದೆ. ಜತೆಗೆ ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಗ್ಯಾರಂಟಿ ಯೋಜನೆಗಳಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಜನರು ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ವರದಿಯ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ, ಉಪಾಧ್ಯಕ್ಷರಾದ ಪ್ರಶಾಂತ್, ಎಸ್.ಎಚ್.ರಾಜೇಂದ್ರ, ಕೆ.ಹನುಮಂತಯ್ಯ ಇದ್ದರು.