ಮಕ್ಕಳ ಭವಿಷ್ಯಕ್ಕೆ ಪೂರಕ ವಾತಾವರಣ ಕಲ್ಪಿಸಿ..

DC Meeting
Published on

ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ

ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಮಕ್ಕಳ ಹಕ್ಕುಗಳ ರಕ್ಷಣೆಯೊಂದಿಗೆ ಸಮಾಜದಲ್ಲಿ ಅವರು ಆರೋಗ್ಯಯುತ ಜೀವನ ನಡೆಸಿ, ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಅಧಿಕಾರಿಗಳು ಅಗತ್ಯವಿರುವ ಪೂರಕ ವಾತಾವರಣ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚಿಸಿದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೇ 25ರಂದು ಆಯೋಜಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಸಹಾಯವಾಣಿ ಸೌಲಭ್ಯ

ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು, ಬಾಲಕಾರ್ಮಿಕರು, ಕಾಣೆಯಾದ, ಮಾದಕ ವ್ಯಸನಕ್ಕೆ ತುತ್ತಾದ, ಪರಿತ್ಯಕ್ತರಾದ, ಬಾಲ್ಯ ವಿವಾಹಕ್ಕೊಳಗಾದ, ಹಿಂಸೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹಾಗೂ ಶಿಕ್ಷಣದಿಂದ ವಂಚಿತರಾದ ಮಕ್ಕಳು ಕಂಡುಬಂದಲ್ಲಿ ಅಂತಹವರ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆ 1098/112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಮಗು ದತ್ತು ಪಡೆಯಲು ಅವಕಾಶ

ಮಕ್ಕಳನ್ನು ದತ್ತು ಪಡೆಯಲು ಇಚ್ಛಿಸುವವರು ವೆಬ್​ಸೈಟ್​ cara.wcd.gov.in ಮುಖಾಂತರ ಅರ್ಜಿ ಸಲ್ಲಿಸಿ ಕಾನೂನುಬದ್ಧವಾಗಿ ದತ್ತು ಪಡೆಯಲು ಅವಕಾಶವಿದೆ. ಅನಧಿಕೃತವಾಗಿ ಮಗು ದತ್ತು ಪಡೆದವರು, ನೀಡಿದವರು ಹಾಗೂ ಸಹಕರಿಸಿದವರಿಗೂ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಲಾಗುವುದು. ಶಾಲಾ-ಕಾಲೇಜುಗಳಲ್ಲಿ ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಕಾಯಿದೆ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಬೇಕು. ಪಾಲಕರ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡುವ ಕೆಲಸವಾಗಬೇಕು ಎಂದರು.

ಸಭೆ ಕಡ್ಡಾಯ

ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ರಕ್ಷಣಾ ಸಮಿತಿ, ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಕಾವಲು ಸಮಿತಿಯ ಸಭೆಗಳನ್ನು ನಿಯಮಿತವಾಗಿ ಪ್ರತಿ ತೆಮಾಸಿಕದಂತೆ ಕಡ್ಡಾಯವಾಗಿ ಮಾಡಬೇಕು ಎಂದು ಡಿಸಿ ಸಲಹೆ ನೀಡಿದರು.

ಸಭೆಯಲ್ಲಿ ಹಿರಿಯ ಸಿವಿಲ್​ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ ಪಿ.ಆರ್​., ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನಾ ನಾಯಕ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

ಮಲ್ಪೆ ಬಂದರಿನಲ್ಲಿ ಮೀನು ಆಯುವ ಅನೇಕ ಮಕ್ಕಳಿದ್ದಾರೆ. ಅವರ ರಕ್ಷಣೆಗೆ ಕಾರ್ಮಿಕ ಇಲಾಖೆಯಿಂದ ಕಾಲಕಾಲಕ್ಕೆ ಕಾರ್ಯಾಚರಣೆ ನಡೆಸಬೇಕು. ತನ್ಮೂಲಕ ಮಕ್ಕಳ ಬಾಲ್ಯ ರಕ್ಷಿಸಿ, ಸುಶಿಕ್ಷಿತರಾಗಿಸಲು ಮುಂದಾಗಬೇಕು. | ಡಾ. ಕೆ.ವಿದ್ಯಾಕುಮಾರಿ. ಉಡುಪಿ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net