ಬಾಲ್ಯವಿವಾಹ ನಡೆಯದಂತೆ ನಿಗಾ ವಹಿಸಿ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ

Progress review meeting Mandya
Published on

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚು ಬಾಲ್ಯವಿವಾಹ ನಡೆಯುವ ಗ್ರಾಮಗಳನ್ನು ಪಟ್ಟಿ ಮಾಡಿ. ಮಾತ್ರವಲ್ಲದೆ ಹೆಚ್ಚು ನಿಗಾವಹಿಸುವುದರ ಜತೆಗೆ ಜಾಗೃತಿ ಶಿಬಿರಗಳನ್ನು ಆಯೋಜಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗನ್ನು ತೊಡೆದು ಹಾಕಲು ಜಿಲ್ಲೆಯಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಹೇಳಿದರು.

ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಹೆಚ್ಚು ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಪ್ರಬಂಧ, ಚರ್ಚಾ ಸ್ಪರ್ಧೆ ಏರ್ಪಡಿಸಿ. ಅದರಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ. ಇದರಿಂದ ಮಕ್ಕಳಿಗೆ ಬಾಲ್ಯವಿವಾಹದ ಬಗ್ಗೆ ಮಾಹಿತಿ ತಿಳಿದುಕೊಂಡಂತೆ ಆಗುತ್ತದೆ. ಮಾತ್ರವಲ್ಲದೆ ಅರಿವು ಕೂಡ ಮೂಡುತ್ತದೆ. ಭಾರತ ಸಾಕ್ಷರತೆ ವಿಷಯದಲ್ಲಿ ಮುಂದೆ ಸಾಗುತ್ತಿದ್ದರೂ ಬಾಲ್ಯವಿವಾಹ, ಬಾಲಾಪರಾಧ, ಬಾಲ ಕಾರ್ಮಿಕ ಪದ್ಧತಿ, ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳು ಕಂಡು ಬರುತ್ತಿರುವುದು ಶೋಚನೀಯ. ಇಂತಹ ಅನಿಷ್ಟ ಪದ್ಧತಿಗಳನ್ನು ದೂರ ಮಾಡಲು ಸಾರ್ವಜನಿಕರು ಕೈಜೋಡಿಸಿ ಎಂದು ಮನವಿ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ಮಾತನಾಡಿ, ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂದು ಸಾರ್ವಜನಿಕರಿಗೆ ಮನದಟ್ಟಾಗಬೇಕು. ಆಗ ಮಾತ್ರ ಬಾಲ್ಯ ವಿವಾಹ ಪದ್ಧತಿಯನ್ನು ಸಮಾಜದಿಂದ ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯ. ಬಾಲ್ಯವಿವಾಹದ ಕಂಡು ಬಂದರೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿ ಅಥವಾ ಪೊಲೀಸ್‌ಗೆ ದೂರು ಸಲ್ಲಿಸಿ. ಬಾಲ್ಯವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈ ಜೋಡಿಸಿ ಎಂದು ಹೇಳಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ಕರ್ನಾಟಕದಲ್ಲಿ ಬಾಲ್ಯ ವಿವಾಹ ನಿಷೇಧ, ಬಾಲನ್ಯಾಯ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಪದ್ದತಿಯಂತಹ ಅನಿಷ್ಟ ಪದ್ದತಿಗಳನ್ನು ಹೋಗಲಾಡಿಸಲು ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಬಾಲ್ಯವಿವಾಹ ತಡೆಯಲು ತಳಮಟ್ಟದ ಅಧಿಕಾರಿಗಳ ಪಾತ್ರ ಹೆಚ್ಚಿರುತ್ತದೆ. ಸದಾ ತಮ್ಮ ಸುತ್ತಮುತ್ತಲಿನ ಜನರೊಂದಿಗೆ ನಿಕಟ ಸಂಪರ್ಕದಲ್ಲಿರುವುದರ ಜತೆಗೆ ಎಚ್ಚರವಹಿಸಿ. ಮಕ್ಕಳು ದೇಶದ ದೊಡ್ಡ ಸಂಪತ್ತು. ಅವರ ರಕ್ಷಣೆ ಎಲ್ಲರ ಹೊಣೆ ಎಂದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಮುಡಾ ಆಯುಕ್ತೆ ಐಶ್ವರ್ಯಾ, ಕಾರ್ಮಿಕ ಇಲಾಖೆ ಅಧಿಕಾರಿ ಚೇತನ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹದೇವ, ಕೆ.ಟಿ.ಸೌಭಾಗ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net