ಹದಿನಾರು ಗ್ರಾಪಂ ಕ್ಷಯ ಮುಕ್ತ: ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ ಮಾಹಿತಿ

Progress Review Meeting on Tuberculosis Eradication Mandya
Published on

ಮಂಡ್ಯ: ಜಿಲ್ಲೆಯಲ್ಲಿ 2023ನೇ ಸಾಲಿನಲ್ಲಿ 16 ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತವೆಂದು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯ ರೋಗ ನಿರ್ಮೂಲನೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 2024ನೇ ಸಾಲಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತ ಮಾಡಲು ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 712 ಕ್ಷಯ ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದು, ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ. ಪ್ರಾರಂಭದಲ್ಲೇ ಕ್ಷಯ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಹಾಗೂ ಈ ರೋಗ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕ್ಷಯರೋಗದಿಂದ ಬಾದಿತ ಸಮುದಾಯ ಹಾಗೂ ವ್ಯಕ್ತಿಯನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಬೇಕು. ಈ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕೆಂದು ಸೂಚಿಸಿದರು. ಕ್ಷಯ ರೋಗಿಗಳಿಗೆ ದೊರಕುವ ಸೇವೆಗಳು ನ್ಯಾಯಯುತವಾಗಿ ಹಕ್ಕು ಮತ್ತು ಗೌರವಯುತವಾಗಿ ಪರಿಣಾಮಕಾರಿಯಾಗಿ ಸಲ್ಲುವಂತೆ ಮಾಡಬೇಕು ಎಂದರು.

ರೋಗದಿಂದ ಗುಣಮುಖರಾದವರು ಹಾಗೂ ಅವರ ಕುಟುಂಬಕ್ಕೆ ಅಂಟಿರುವ ಕಳಂಕ ಮತ್ತು ಪಕ್ಷಪಾತ ತೊಲಗಿಸಿ ಸಾಮಾಜಿಕ ಭದ್ರತೆ ಒದಗಿಸಬೇಕು. ಸರ್ಕಾರದಿಂದ ಕ್ಷಯ ರೋಗಗಳಿಗೆ ದೊರೆಯುವ ಹಲವಾರು ಯೋಜನೆ ವ್ಯವಸ್ಥೆ ಹಾಗೂ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಚಿಕಿತ್ಸೆಯ ಬಗ್ಗೆ ತಿಳಿವಳಿಕೆ ಹಾಗೂ ಚಿಕಿತ್ಸೆಗೆ ಒಳಪಡುವಂತೆ ಸಾಕ್ಷರತೆ ಮೂಡಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.

ಸೂಕ್ತ ಸಮಯದಲ್ಲಿ ರೋಗಿಗಳಿಗೆ ರಕ್ತ ಸಿಗದೆ ಸಾವನ್ನಪ್ಪಿರುವುದನ್ನು ನಾವು ನೋಡಿದ್ದೇವೆ. ಆದ್ದರಿಂದ ಮುಂಜಾಗ್ರತ ಕ್ರಮವಾಗಿ ರಕ್ತ ಸಂಗ್ರಹಿಸಿಟ್ಟುಕೊಳ್ಳುವ ಕೆಲಸವಾಗಬೇಕು. ಸಂಘ ಸಂಸ್ಥೆ ಹಾಗೂ ಇಲಾಖೆ ಜತೆಗೆ ಎನ್‌ಎಸ್‌ಎಸ್ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ರಕ್ತದಾನ ಮಾಡಲು ಪ್ರೇರೇಪಿಸಬೇಕು. ಜಿಲ್ಲೆಯಲ್ಲಿರುವ ಎಚ್‌ಐವಿ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಕಲ್ಪಿಸಿ ಅವರು ಆರ್ಥಿಕವಾಗಿ ಸಬಲರಾಗಲು ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಡಾ.ಟಿ.ಬಿ.ಮರೀಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net