

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಕಂದಾಯ, ಪೊಲೀಸ್, ಸಮಾಜ ಕಲ್ಯಾಣ, ಪಂಚಾಯತ ರಾಜ್ ಇಲಾಖೆಗಳು ಜಂಟಿಯಾಗಿ ಸಭೆ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದ ಅಽಕಾರಿಗಳು ತಮ್ಮ ಹಂತದಲ್ಲಿ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳ ದಾಖಲಾತಿ ವೇಳೆ ಅಗತ್ಯ ದಾಖಲಾತಿಗಳನ್ನು ಪಡೆದು ಜಾತಿ ನಮೂದು ಮಾಡಿಕೊಳ್ಳಬೇಕು. ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿ ನೀಡುವ ಕುರಿತು ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಪಾಲಿಕೆ ಆಯುಕ್ತ ಡಾ. ರುದ್ರೇಶ ಗಾಳಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಬರಮನಿ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ ವೇದಿಕೆಯಲ್ಲಿದ್ದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭ ಸ್ವಾಗತಿಸಿದದರು. ತಹಸೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸರ್ಕಾರಿ ವಕೀಲರು, ಜಿಲ್ಲಾ ಸಫಾಯಿ ಕರ್ಮಚಾರಿಗಳ ಸಮಿತಿ ಸದಸ್ಯರು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.