

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ ನಿಗಧಿ ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಆರ್ಥಿಕ ವರ್ಷ ಕೊನೆಗೊಳ್ಳುವ ಹಂತದಲ್ಲಿದೆ. ಪ್ರಸಕ್ತ ವರ್ಷಕ್ಕೆ ನಿಗಧಿಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಂಟಿ ನಿರ್ದೇಶಕ ಚಂದ್ರಶೇಖರ, ಪ್ರಸಕ್ತ ವರ್ಷದಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಶೇ.೬೭ರಷ್ಟು ಪ್ರಗತಿ ಸಾಧಿಸಲಾಗಿದೆ. ಮಾರ್ಚ್ ಅಂತ್ಯದೊಳಗೆ ಶೇಕಡವಾರು ಪ್ರಗತಿ ಸಾಧಿಸಲಾಗುವುದು ಎಂದು ತಿಳಿಸಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ಮಾತನಾಡಿ, ರೈತ ಮಹಿಳೆಯರಿಗೆ ಹೈನುಗಾರಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸು, ಎಮ್ಮೆ ಖರೀದಿಗೆ ಶೇ.೬ರಷ್ಟು ಬಡ್ಡಿ ದರದಲ್ಲಿ ಸಹಾಯಧನ ಕಲ್ಪಿಸಲಾಗುತ್ತಿದೆ. ಜೊತೆಗೆ ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲಾಗುತ್ತಿದ್ದು, ಶೇ.೧೦೦ ರಷ್ಟು ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಉಪ ನಿರ್ದೇಶಕ ಶೇಖರ್, ಪ್ರಸಕ್ತ ವರ್ಷದಲ್ಲಿ ಶೇ.೮೭ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕಲ್ಪಿಸಲು ಬಾಕಿ ಇದ್ದು, ಒಂದು ತಿಂಗಳಲ್ಲಿ ಶೇಕಡಾವಾರು ಪ್ರಗತಿ ಸಾಧಿಸಲಾಗುವುದು. ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ವಸತಿ ಶಾಲೆಗಳು, ಕಾನೂನು ಪದವೀಧರರಿಗೆ ಪ್ರೋತ್ಸಾಹ ಹೀಗೆ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಮಾಹಿತಿ ನೀಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಶೇ.೯೫ ರಷ್ಟು ಪ್ರಗತಿ ಸಾಧಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾತಿ ಹೆಚ್ಚಳ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನ, ಉದ್ಯೋಗಿನಿ ಹಾಗೂ ಚೇತನ ಯೋಜನೆಯಡಿ ಸೌಲಭ್ಯ ಹೀಗೆ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.
ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಸಚಿನ್ ಮಾತನಾಡಿ, ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯಧನ ಕಲ್ಪಿಸಲಾಗುತ್ತಿದ್ದು, ಶೇ.೬೦ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಶಿರಾಜ್ ಅಹ್ಮದ್ ಮಾತನಾಡಿ, ಬಾಲ ಕಾರ್ಮಿಕರ ಪುನರ್ ವಸತಿ ಹಾಗೂ ಯೋಜನಾ ಕಾರ್ಯಕ್ರಮದಡಿ ಶೇ.೯೭ರಷ್ಟು ಪ್ರಗತಿ ಸಾಧಿಸಲಾಗಿದೆ. ಬಾಲಕಾರ್ಮಿಕ ಪದ್ಧತಿ, ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಹಕಾರ ಇಲಾಖೆಯ ಸಹಾಯಕ ನಿಬಂಧಕ ಶೈಲಜಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಲೋಕೇಶ್, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಯಕ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ತಮ್ಮ ಇಲಾಖೆಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಆಹಾರ ಇಲಾಖೆಯ ಉಪ ನಿರ್ದೇಶಕ ಜೆ.ಬಿ.ಶ್ರೀಧರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ ಇತರರು ಇದ್ದರು.