ಸೂಕ್ತ ಪರಿಹಾರ ಕೊಡಿಸುವ ಭರವಸೆ

Promise of appropriate compensation
ಇಟ್ಟಿಗೆ ಭಟ್ಟಿಯಲ್ಲಿ ನಡೆದ ಹಲ್ಲೆಯಿಂದಾಗಿ ಗಾಯಗೊಂಡು ವಿಜಯಪುರದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ಮಾಡಿ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಎಸ್ಪಿ ಲಕ್ಷ್ಮಣ ನಿಂಬರಗಿ, ಡಾ. ಶಿವಾನಂದ ಮಾಸ್ತಿಹೊಳಿ, ಡಾ. ಸಂಪತ ಕುಮಾರ ಗುಣಾರಿ ಮತ್ತಿತರರಿದ್ದಾರೆ.
Published on

ವಿಜಯಪುರ: ಇತ್ತೀಚೆಗೆ ಇಟ್ಟಿಗೆ ಭಟ್ಟಿಯಲ್ಲಿ ನಡೆದ ಹಲ್ಲೆಯಿಂದಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಬುಧವಾರ ಜಿಲ್ಲಾಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಕಾರ್ಮಿಕರಿಗೆ ಪರಿಹಾರದ ಹಣ ಮತ್ತು ಉದ್ಯೋಗ ನೀಡಲು ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇಟ್ಟಿಗೆ ಭಟ್ಟಿ ನೋಂದಣಿ ಕೂಡ ರದ್ದು ಪಡಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ಇನ್ನು ಹಲ್ಲೆಯಲ್ಲಿ ಭಾಗಿಯಾದ ಉಳಿದವರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆ ವ್ಯಾಪಿಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ಯೋಗಕ್ಷೇಮ ವಿಚಾರಿಸಲು ಸಮಿತಿ ರಚಿಸಲಾಗಿದ್ದು, ತಹಸೀಲ್ದಾರ, ತಾಲೂಕು ಇಒ, ಕಾರ್ಮಿಕಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಸ್ಥಳೀಯ ಸಂಘಟಕರು ಸಮಿತಿ ತಂಡದಲ್ಲಿ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ನಂತರ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಶವಾಗಾರ ಹಾಗೂ ಇತರ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ ಕುಮಾರ ಗುಣಾರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net