

ಕುಶಾಲನಗರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಜನಸಾಮಾನ್ಯರ ಅಭಿವೃದ್ಧಿಗಾಗಿ ಕೈಗೊಂಡಿರುವ ಜನಪರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲುವು ಮೂಡಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಮಂತರ್ ಗೌಡ ಹೇಳಿದರು.
ಕುಶಾಲನಗರ ಸಮೀಪದ ಹೆಬ್ಬಾಲೆ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ. ಬದಲಿಗೆ ಅಂಬಾನಿ ಸೇರಿದಂತೆ ಕಾರ್ಪೋರೇಟ್ ಸಂಸ್ಥೆಗಳಿಗೆ ಪೂರಕವಾಗುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜನಸಾಮಾನ್ಯರಿಗೆ ಐದು ನೂರು ರೂಪಾಯಿಗೆ ಸಿಗುತ್ತಿದ್ದ ಅಡುಗೆ ಗ್ಯಾಸ್ ಸಿಲಿಂಡರ್‌ಅನ್ನು ಒಂದು ಸಾವಿರಕ್ಕೂ ಅಧಿಕ ರೂಪಾಯಿಗೆ ಏರಿಕೆ ಮಾಡಲಾಗಿದೆ. ಒಂದು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ ಮೋದಿ ಅವರು ಅದನ್ನು ಜಾರಿಗೆ ತರಲು ವಿಫಲರಾಗಿದ್ದಾರೆ. ಸುಳ್ಳು ಭರವಸೆ ನೀಡುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಮಾಡದ ಪ್ರಧಾನಿ ಮೋದಿ ಅವರು, ಜನಸಾಮಾನ್ಯರನ್ನು ಭಾವನಾತ್ಮಕವಾಗಿ ಸೆಳೆಯುವ ಉದ್ದೇಶದಿಂದ ಕೊಡಗು-ಮೈಸೂರು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಅವರನ್ನು ಲೋಕಸಭಾ ಚುನಾವಣೆ ಅರ್ಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಮಾತನಾಡಿ, ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಬಡಜನರ ಬದುಕಿಗೆ ಪೆಟ್ಟು ನೀಡಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಸ್.ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಎಚ್.ಟಿ.ದಿನೇಶ್, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎನ್.ಬಸವರಾಜು, ಡಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಎಚ್.ಕೆ.ನಟೇಶ್ ಗೌಡ, ಕುಶಾಲನಗರ ಪುರಸಭೆ ಮಾಜಿ ಸದಸ್ಯ ಜೋಸೆಫ್ ವಿಕ್ಟರ್ ಸೋನ್ಸ್, ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಕೆ.ರವೀಂದ್ರನಾಥ್, ಎಚ್.ಜೆ.ನಾರಾಯಣ, ಗಣೇಶ್, ಕೆ.ಎಸ್.ಕೃಷ್ಣೇಗೌಡ ಇತರರು ಇದ್ದರು.