ಕ್ರೀಡಾಕೂಟದಿಂದ ಮನೋದೈಹಿಕ ಆರೋಗ್ಯ ವೃದ್ಧಿ

h28-education
Published on

ಹುಬ್ಬಳ್ಳಿ: ಬೋಧನೆ ವೇಳೆ ಕ್ರಿಯಾಶೀಲತೆ ಉಳಿಸಿಕೊಳ್ಳಬೇಕೆಂದರೆ ಕ್ರೀಡಾಕೂಟಗಳು ಶಿಕ್ಷಕರಿಗೆ ಅಗತ್ಯ. ಮನೋದೈಹಿಕ ಆರೋಗ್ಯವೂ ವೃದ್ಧಿಯಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುಬ್ಬಳ್ಳಿ ಶಹರ ಘಟಕ ವತಿಯಿಂದ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಕರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಬೋಧನಾ ಕೌಶಲ ವೃದ್ಧಿಗೆ ಸಹಕಾರಿಯಾಗಲಿದೆ ಎಂದರಲ್ಲದೆ, ಶಿಕ್ಷಕರ ಸಂಘದ ವತಿಯಿಂದ ಸಾಕಷ್ಟು ಬೇಡಿಕೆ ಈಡೇರಿಕೆಗೆ ಮನವಿ ಬಂದಿದೆ. ಶಿಕ್ಷಕರ ಸಮಸ್ಯೆ ಪರಿಹರಿಸಲು ಸಿದ್ಧವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ರ್ಚಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿತ್ಯ ಮಕ್ಕಳೊಂದಿಗೆ ಕಾಲ ಕಳೆಯುವ ಶಿಕ್ಷಕರು ಕ್ರೀಡಾಕೂಟದಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಲಿ ಎಂಬ ಸದುದ್ದೇಶದಿಂದ ಶಿಕ್ಷಕರಿಗಾಗಿಯೇ ಕ್ರೀಡಾಕೂಟ ಆಯೋಜಿಸಿದ್ದೇವೆ. ಶಿಕ್ಷಕರಲ್ಲಿರುವ ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿದೆ ಎಂದರು.

ಸಚಿವ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಅನೀಲಕುಮಾರ ಪಾಟೀಲ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ, ಬಿಆರ್​ಸಿ ಎಂ.ಎಸ್. ಶಿವಳ್ಳಿಮಠ, ಶಿಕ್ಷಕರ ಸಂಘದ ಉಪಾಧ್ಯಕ್ಷ ಎ.ಎಚ್. ಬಣವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಹುಬ್ಬಳ್ಳಿ ಶಹರ ಅಧ್ಯಕ್ಷ ಎಂ.ಎಚ್. ಜಂಗಲಿ, ಎಂ.ಯು. ಶಿರಹಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net