ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಅಭ್ಯುದಯ, ಸಂಸದ ಬಚ್ಚೇಗೌಡ ಅಭಿಮತ ರಸ್ತೆ ಕಾಮಗಾರಿಗೆ ಚಾಲನೆ

11 Nela Ph 01 Gudali Pooje
Published on

ನೆಲಮಂಗಲ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆಗಳು ಮಹತ್ವದ ಪಾತ್ರವಹಿಸುತ್ತವೆ ಎಂದು ಎಂದು ಸಂಸತ್ ಸದಸ್ಯ ಬಿ.ಎನ್.ಬಚ್ಚೇಗೌಡ ಅಭಿಪ್ರಾಯಪಟ್ಟರು.

ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಯೋಜನೆ ಉದ್ದೇಶವಾಗಿದೆ. ಪ್ರಧಾನಮಂತ್ರಿ ಸಡಕ್ ಯೋಜನೆಯಡಿ ಲೋಕಸಭಾ ಕ್ಷೇತ್ರದ 9 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 249 ಕಿಮೀ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 173 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದರು.

ಯಲಹಂಕ ವಿಧಾನಸಭಾ ಕ್ಷೇತ್ರ ದೊಡ್ಡ ಕ್ಷೇತ್ರವಾಗಿದ್ದು, ಈ ವ್ಯಾಪ್ತಿಯಲ್ಲಿ 46 ಕಿಮೀ ರಸ್ತೆಗೆ 45 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ ಗೋದಾಮುಗಳಿಗೆ ಬರುವ ಅಧಿಕ ಭಾರದ ವಾಹನಗಳ ಸಂಚಾರದಿಂದಾಗಿ ರಸ್ತೆಗಳು ಹಾಳಾಗಿವೆ. ಕಿಮೀ ರಸ್ತೆಗೆ ಒಂದು ಕೋಟಿ ಅನುದಾನ ನೀಡಲಾಗುತ್ತಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗುತ್ತಿದೆ ಎಂದರು.

ವೈದ್ಯರ ಸಲಹೆ ಮೇರೆಗೆ ಕೋವಿಡ್ ಪರಿಸ್ಥಿತಿಯಲ್ಲಿ ಕ್ಷೇತ್ರದ ಪ್ರವಾಸ ಸಾಧ್ಯವಾಗಲಿಲ್ಲ. ಕ್ಷೇತ್ರ ವ್ಯಾಪ್ತಿಯ ಎಲ್ಲ ತಾಲೂಕುಗಳಲ್ಲೂ ಯೋಜನೆಯಡಿ ಅನೇಕ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ ಜನರ ಋಣ ತೀರಿಸುವೆ ಎಂದರು.

ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ಕೋವಿಡ್ ಪರಿಸ್ಥಿತಿ ಮತ್ತು ಚುನಾವಣಾ ನೀತಿ ಸಂಹಿತೆಯಿಂದಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡುವುದು ವಿಳಂಬವಾಗಿದೆ. ಅಂದಾಜು 17.5 ಕಿಮೀ ರಸ್ತೆ ಅಭಿವೃದ್ಧಿಗೆ ಈಗ ಚಾಲನೆ ನೀಡಲಾಗಿದೆ. ಈ ಕಾಮಗಾರಿಯಿಂದ ಹತ್ತಾರು ಗ್ರಾಮಗಳ ರಸ್ತೆ ಅಭಿವೃದ್ಧಿಯಾಗಲಿದೆೆ. ಗುತ್ತಿಗೆದಾರರು ಐದು ವರ್ಷ ರಸ್ತೆಯನ್ನು ನಿರ್ವಹಿಸಲಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ವೇಳೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಪಂ ಸದಸ್ಯ ಅರಸ ಹನುಮಂತೇಗೌಡ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಜಯಣ್ಣ, ಉತ್ತರ ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಎಚ್.ಆರ್. ಬಸವರಾಜು, ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಜಣ್ಣ, ಯಲಹಂಕ ಮಂಡಲ ಅಧ್ಯಕ್ಷ ಹನುಮಯ್ಯ, ಪ್ರಧಾನ ಕಾರ್ಯದರ್ಶಿ ಜನಾರ್ಧನ್, ಸೊಂಡೇಕೊಪ್ಪ ಗ್ರಾಪಂ ಮಾಜಿ ಸದಸ್ಯ ಎಸ್.ಎನ್. ಶಶಿಧರ್, ಮುಖಂಡ ಎಚ್.ಬಿ. ಜಗದೀಶ್, ವೆಂಕಟೇಶ್, ಪ್ರಕಾಶ್, ನಾಗೇಶ್, ಎಸ್.ಪಿ. ಶಂಕರ್‌ಸ್ವಾಮಿ ಮತ್ತಿತರರಿದ್ದರು.

ನಗರಸಭೆಯಾಗಿ ಮೇಲ್ದರ್ಜೆಗೆ: ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ 5 ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಂಡು ನಗರಸಭೆಯಾಗಿ ಮೇಲ್ದರ್ಜೆಗೇರಿಸಿದ್ದು, ಶೀಘ್ರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯಲಿದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net