ಆರೋಪಿಗಳ ಬಂಧನಕ್ಕೆ ದಂಡೋರ ಪಟ್ಟು

protest
protest
Published on

ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
ನಾಯಿ ಬೊಗಳಿತು ಎಂಬ ಕಾರಣಕ್ಕೆ ದೊಡ್ಡಚೀಮನಹಳ್ಳಿಯಲ್ಲಿ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿದ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕ್ರಮಕೈಗೊಳ್ಳದ ವಿಶ್ವನಾಥಪುರ ಠಾಣೆ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಅವರನ್ನು ವರ್ಗಾವಣೆ ಮಾಡಿ ಹೊಸ ತನಿಖಾಧಿಕಾರಿಯನ್ನು ನೇಮಿಸಬೇಕು ಎಂದು ಕರ್ನಾಟಕ ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ಜಿ.ಮಾರಪ್ಪ ಆಗ್ರಹಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಆರೋಪಿಗಳ ರಕ್ಷಣೆಗೆ ಮುಂದಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರದಲ್ಲಿ ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.ದೊಡ್ಡಚೀಮನಹಳ್ಳಿಯಲ್ಲಿ 11 ದಿನಗಳ ಹಿಂದೆ ನಾಯಿ ಬೊಗಳಿದ್ದಕ್ಕೆ ಮಾಲೀಕ ಮಧುಕುಮಾರ್(34) ಎಂಬಾತನಿಗೆ ಚಾಕುವಿನಿಂದ ಕಿರಾತಕರು ಇರಿದಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆ ಮೂಲಕ ಉಳಿಕೆ ಚಾಕುವನ್ನು ಹೊರತೆಗೆದಿದ್ದಾರೆ. ಇಂತಹ ಮಾರಣಾಂತಿಕ ಹಲ್ಲೆ ಮಾಡಿದ ಬಲಾಢ್ಯರ ರಕ್ಷಣೆಯಲ್ಲಿ ಪೊಲೀಸರು ಭಾಗಿಯಾಗಿದ್ದಾರೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಮಾದಿಗ ದಂಡೋರದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ಎಂ.ರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿ ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಸಮಿತಿಯ ತಾಲೂಕು ಅಧ್ಯಕ್ಷ ಬುಳ್ಳಳ್ಳಿ ರಾಜಪ್ಪ ಆರೋಪಿಸಿದರು. ಆದಷ್ಟು ಬೇಗ ಪೋಲಿಸರು ಆರೋಪಿಗಳನ್ನು ಬಂಧಿಸದಿದ್ದರೆ ಹೋದರೆ ಠಾಣೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net