ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Protest against amusement park project Mandya
Published on

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಅನುಷ್ಠಾನ ವಿರೋಧಿಸಿ ರೈತ ಮತ್ತು ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.

ಸರ್ ಎಂ.ವಿ ಪ್ರತಿಮೆ ಎದುರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದರು. ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಮಾತನಾಡಿ, ಅಮೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ವಿರೋಧಿಸಿ ಜಿಲ್ಲೆಯಲ್ಲಿ ಹಲವಾರು ತಿಂಗಳುಗಳಿಂದ ಸಂಘಟನೆಗಳು ಹೋರಾಟ ಮಾಡುತ್ತಿದ್ದೇವೆ. ವಿರೋಧದ ನಡುವೆಯೂ ಸರ್ಕಾರ ಕಾಮಗಾರಿ ಆರಂಭಿಸಿ ಮುಂದುವರಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊನ್ನೆಯಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದು, ಅಲ್ಲೂ ಸಹ ರೈತ ಮತ್ತು ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಇದನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಉಸ್ತುವಾರಿ ಸಚಿವರು ಭರವಸೆ ನೀಡಿದರು. ಆದರೂ, ಕಾಮಗಾರಿ ಮುಂದುವರಿಸಲಾಗುತ್ತಿದೆ. ಇದಲ್ಲದೆ ಶಾಸಕ ರವಿಕುಮಾರ್ ಗಣಿಗ ಚಳವಳಿ ಮತ್ತು ರೈತರ ಬಗ್ಗೆ ಬಹಳ ಹಗುರವಾಗಿ ಮಾತನಾಡುವುದ ಸರಿಯಲ್ಲ. ಅಮ್ಯೂಸ್‌ಮೆಂಟ್ ಪಾರ್ಕ್ ವಿರೋಧಿಸಿ ಜಿಲ್ಲೆಯ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ವಿವಿಧ ಸಂಘಟನೆ ಮುಖಂಡರಾದ ಎಸ್.ನಾರಾಯಣ್, ಎಚ್.ಡಿ. ಜಯರಾಂ, ಎಂ.ಬಿ.ನಾಗಣ್ಣ, ಶಿವಳ್ಳಿ ಚಂದ್ರು, ಇಂಡುವಾಳು ಚಂದ್ರಶೇಖರ್, ಸುಧೀರ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net