

ಮಂಡ್ಯ: ಬೀದಿ ದೀಪ, ಒಳ ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ನಗರದ ವಿವಿಧ ಬಡಾವಣೆಯ ನಿವಾಸಿಗಳು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಸಮರ್ಪಕವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿ ನಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದರೂ ಇನ್ನೂ ಸ್ಪಂದಿಸುತ್ತಿಲ್ಲ. ಸ್ಥಳೀಯ ಶಾಸಕರು ನಿರ್ಲಕ್ಷೃ ತೋರದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿಕೊಡಬೇಕು. ಇಲ್ಲವಾದರೆ ನಿರಂತರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಿವಾಸಿ ಎಚ್.ಆರ್.ಅಶೋಕ್‌ಕುಮಾರ್ ಮಾತನಾಡಿ, ಬೀದಿ ದೀಪ, ಕುಡಿಯುವ ನೀರು, ಸ್ವಚ್ಚತೆ, ರಸ್ತೆ, ಚರಂಡಿ ಸೇರಿದಂತೆ ಹಲವು ಮೂಲ ಸೌಲಭ್ಯ ಕೊಡುವಲ್ಲಿ ಬೇಲೂರು ಗ್ರಾಮ ಪಂಚಾಯಿತಿ ವಿಫಲವಾಗಿದೆ. ಈಗಲಾದರೂ ತಕ್ಷಣ ಮೂಲ ಸೌಕರ್ಯ ನೀಡುವ ಮೂಲಕ ನಿವಾಸಿಗಳ ನೆರವಾಗಿ ಬರಬೇಕು. ಗ್ರಾಪಂಯಲ್ಲಿ ಸರಿಯಾಗಿ ಸ್ಪಂದನೆ ಸಿಗದಿದ್ದರೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕಾವೇರಿ ನಗರ ಹಿತರಕ್ಷಣಾ ಸಮಿತಿಯ ದೇವೇಗೌಡ, ನಾರಾಯಣಸ್ವಾಮಿ, ದೇವರಾಜು, ಮನೋಜ್, ಭಾಗ್ಯಮ್ಮ, ಚಂದ್ರಶೇಖರ್, ಅನಿಲ್‌ಕುಮಾರ್ ಇತರರಿದ್ದರು.