ಕರ್ನಾಟಕದ ಮೇಲೆ ನಿರಂತರ ದಬ್ಬಾಳಿಕೆ ಆರೋಪ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Protest against central government Mandya
Published on

ಮಂಡ್ಯ: ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ನೇತೃತ್ವದಲ್ಲಿ ಸರ್‌ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿಗೆ ಮನವಿ ಸಲ್ಲಿಸಿದರು.

ನೆಲ, ಜಲ, ಭಾಷೆ, ಸಂಸ್ಕೃತಿ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಆಡಳಿತಾರೂಢ ಸಂಸದರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರೂ ಅನುದಾನ, ಅಧಿಕಾರ, ಅಭಿವೃದ್ಧಿ ಮತ್ತು ಆದ್ಯತೆ ವಿಚಾರದಲ್ಲಿ ಕರ್ನಾಟಕಕ್ಕೆ ದ್ರೋಹವಾಗುತ್ತಿದೆ. ದೇಶದಲ್ಲೇ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದ್ವಿತೀಯ ಸ್ಥಾನದಲ್ಲಿದೆ. ಆದರೆ ಕೇಂದ್ರದಿಂದ ತೆರಿಗೆ ಪಾಲು ಪಡೆಯುವಾಗ ವಂಚಿಸಲಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲೂ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಬಿಜೆಪಿಗರ ನಿರ್ದೇಶನದಂತೆ ನಡೆದುಕೊಳ್ಳುತ್ತಿರುವ ರಾಜ್ಯಪಾಲರು, ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗೆ ಸಹಿ ಹಾಕದಿರುವುದು ಅವರ ಜನವಿರೋಧಿ ನಡೆಗೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರದಿಂದ ಸರಣಿಯಾಗಿ ಕರ್ನಾಟಕದ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ಮನಗಂಡು ರಾಷ್ಟ್ರಪತಿ ಮಧ್ಯಪ್ರವೇಶಿಸಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಿ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ ಎಲ್.ಸಂದೇಶ್, ಎಚ್.ಡಿ.ಜಯರಾಂ, ಎಂ.ಕೃಷ್ಣ, ಅಶೋಕ್, ನಾಗರಾಜು, ಬಸವರಾಜು, ಜಯರಾಂ, ನಾಗರತ್ನಾ, ವೀಣಾ ಶಂಕರ್, ನರಸಿಂಹಮೂರ್ತಿ, ಗುರುರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net