

ಮಂಗಳೂರು: ದಿನಬಳಕೆಯ ಆಹಾರ ವಸ್ತುಗಳ ಮೇಲೆ ವಿಧಿಸಿರುವ ಜಿಎಸ್ ಟಿ ಹಿಂಪಡೆಯುವಂತೆ ಒತ್ತಾಯಿಸಿ ವಿಮೆನ್ ಇಂಡಿಯಾ ಮೂವ್ ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಸಮಿತಿಯ ರಾಷ್ಟ್ರೀಯ ಕಾರ್ಯದರ್ಶಿ ಆಯಿಷಾ ಬಜಪೆ, ಕೇಂದ್ರದ ಕ್ರಮದಿಂದ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದೆ. ಎಲ್ ಪಿಜಿ ದರ ರೂ.50 ರಷ್ಟು ಏರಿಕೆ ಬೆನ್ನಲ್ಲೇ ದಿನಬಳಕೆಯ ಆಹಾರ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ದೊಡ್ಡ ಹೊಡೆತ ಬಿದ್ದಿದೆ ಎಂದು ಹೇಳಿದರು.
ಎಸ್ ಡಿಪಿಐ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು, ನ್ಯಾಷನಲ್ ವಿಮೆನ್ಸ್ ಫ್ರಂಟ್ ನಾಯಕಿ ಮುಝಾಹಿದ ಕಣ್ಣೂರು, ಸಸ್ಮಾ ಬಂಟ್ವಾಳ ಉಪಸ್ಥಿತರಿದ್ದರು.