ಮಣ್ಣುಗಾರಿಕೆ ವಿರೋಧಿಸಿ ಪ್ರತಿಭಟನೆ

oppo_2
oppo_2
Published on

ಮದ್ದೂರು: ತಾಲೂಕಿನ ಕೆರೆಗಳಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಗಣಿಗಾರಿಕೆಯನ್ನು ನಿಲ್ಲಿಸಬೇಕು ಹಾಗೂ ಕೆರೆಗಳನ್ನು ಸರಂರಕ್ಷಣೆ ಮಾಡುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೆರೆಗಳಲ್ಲಿ ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಮಣ್ಣುಗಾರಿಕೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ತಾಲೂಕಿನಲ್ಲಿ ಹಲವು ಕೆರೆಗಳಲ್ಲಿ ಸರ್ಕಾರದ ಪೂರ್ವಾನುಮತಿ ಪಡೆಯದೆ ಅವೈಜ್ಞಾನಿಕ ಹಾಗೂ ಅಕ್ರಮವಾಗಿ ಬೃಹತ್ ಗಾತ್ರದ ವಾಹನಗಳಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಹಣ ಮಾಡುವ ದುರುದ್ದೇಶದಿಂದ ಕೆರೆಗಳ ಭೂ ಗರ್ಭವನ್ನು ಅಗೆದು ಪ್ರಪಾತ ಸೃಷ್ಟಿ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಅಪಾಯಗಳು ಸಂಭವಿಸುವ ಸಾಧ್ಯತೆ ದಟ್ಟವಾಗಿದೆ. ಬೃಹತ್ ವಾಹನಗಳಿಂದ ಮಣ್ಣು ತುಂಬಿ ಸಾಗಿಸುತ್ತಿರುವುದರಿಂದ ರಸ್ತೆಗಳು ಹಾಳಾಗುತ್ತಿವೆ ಹಾಗೂ ಪಟ್ಟಣದ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಭಾರಿ ವಾಹನಗಳು ಸಂಚರಿಸಿದಾಗ ರಸ್ತೆ ಧೂಳುಮಯವಾಗಿ ಅನೈರ್ಮಲ್ಯ ವಾತಾವರಣ ಉಂಟಾಗುವ ಮೂಲಕ ಜನರ ಆರೋಗ್ಯದ ಮೇಲೂ ದುಷ್ಟಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.


ಕೂಡಲೆ ಅಕ್ರಮ ಮಣ್ಣು ಗಣಿಗಾರಿಕೆಯನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವೇದಿಕೆ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಮನವಿ ಸ್ವೀಕರಿಸಿ ಮಾತನಾಡಿದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಚ್.ಎನ್.ನಾಗರಾಜು, ಅಕ್ರಮ ಮಣ್ಣುಗಾರಿಕೆ ನಡೆಯುತ್ತಿರುವ ಬಗ್ಗೆ ಈಗಾಗಲೇ 4 ದೂರುಗಳನ್ನು ಪೊಲೀಸರಿಗೆ ನೀಡಲಾಗಿದೆ. ನಗರಕರೆ, ಆಲಂಶೆಟ್ಟಿಹಳ್ಳಿ, ವಳಗೆರೆಹಳ್ಳಿ ಹಾಗೂ ಆತಗೂರು ಸೇರಿದಂತೆ ಇತರ ಗ್ರಾಮಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿರುವುದು ಕಂಡುಬಂದಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್, ಜಿಲ್ಲಾಧಿಕಾರಿ, ಕಾವೇರಿ ನೀರಾವರಿ ನಿಗಮದ ಇಲಾಖೆಯ ಉನ್ನತ ಅಧಿಕಾರಿಗಳಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.


ಪ್ರತಿಭಟನೆಯಲ್ಲಿ ಮಾಜಿ ಯೋಧ ವಿ.ಡಿ.ಶ್ರೀನಿವಾಸ್, ಮುಖಂಡರಾದ ವಿ.ಎನ್.ಗಿರೀಶ್, ವಿ.ಎಚ್.ಶಿವಲಿಂಗಯ್ಯ, ವೆಂಕಟೇಶ್, ದೊರೆ, ಎಂ.ವೀರಪ್ಪ, ರಾಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net