

ಮಂಡ್ಯ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲವೆಂದು ಐಎನ್‌ಡಿಐಎ ಒಕ್ಕೂಟದ ತಮಿಳುನಾಡಿನ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮೌನವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದರು.
ಸರ್‌ಎಂವಿ ಪ್ರತಿಮೆ ಎದುರು ನಡೆದ ಎಂಟನೇ ಸೋಮವಾರದ ಕಾವೇರಿ ಚಳವಳಿಯಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ಮೇಕೆದಾಟು ಯೋಜನೆ ಬಗ್ಗೆ ತ.ನಾಡು ತನ್ನ ನಿಲುವು ಘೋಷಿಸಿದೆ. ಆದರೆ ಐಎನ್‌ಡಿಐಎ ಮೈತ್ರಿಕೂಟದ ನೇತೃತ್ವ ವಹಿಸಿರುವ ಕಾಂಗ್ರೆಸ್ ಈ ಬಗ್ಗೆ ತುಟಿ ಬಿಚ್ಚಿಲ್ಲ ಏಕೆ ಎಂದು ಪ್ರಶ್ನಿಸಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾನೂನು ಹೋರಾಟದ ಜತೆಗೆ ನ್ಯಾಯ ಮಂಡಳಿಯ ತೀರ್ಪಿನಂತೆ ರಾಜ್ಯದ ಪಾಲಿನ ಸಂಪೂರ್ಣ ನೀರನ್ನು ಬಳಕೆ ಮಾಡಿಕೊಳ್ಳಬೇಕು. ನೀರಾವರಿ ಪ್ರದೇಶವನ್ನು 18.8 ಲಕ್ಷ ಎಕರೆಗೆ ವಿಸ್ತರಿಸಬೇಕು. ಆದರೆ ಈ ಬಗ್ಗೆಯೂ ವಿಫಲವಾಗಿರುವ ರಾಜ್ಯ ಸರ್ಕಾರ ಇದೀಗ ಮೇಕೆದಾಟು ವಿಚಾರದಲ್ಲಿಯೂ ನಿರ್ಲಕ್ಷೃ ತೋರಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯನ್ನು ಮುಂದಿಟ್ಟುಕೊಂಡು ಚುನಾವಣೆಗೆ ಮುಂದಾಗಿದೆ. ಆದರೆ ಬರಗಾಲದ ಹಿನ್ನೆಲೆಯಲ್ಲಿ ರೈತರ ಪರಿಸ್ಥಿತಿ ಹೇಳ ತೀರದಾಗಿದೆ. ಜನ ಜಾನುವಾರುಗಳು ನೀರಿಲ್ಲದೆ ಪರಿತಪಿಸುತ್ತಿವೆ. ನಾಲೆಗಳಿಗೆ ನೀರು ಹರಿಸಿ ಎಂದು ಒತ್ತಡ ಹಾಕುತ್ತಿದ್ದರೂ ನಾಲೆಗೆ ನೀರು ಬಿಡದೆ ತ.ನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಳೆ ಪರಿಹಾರದ ಬಗ್ಗೆ ಚಕಾರ ಎತ್ತುತ್ತಿಲ್ಲ. ಬೆಳೆಗಳೆಲ್ಲ ಒಣಗಿ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ಪರಿಹಾರ ನೀಡಲು ನಿರ್ಲಕ್ಷೃ ವಹಿಸಿದ್ದು, ರೈತರ ಜೀವದ ಜತೆ ಚೆಲ್ಲಾಟ ಆಡುತ್ತಿದೆ. ರೈತರು ಕೃಷಿ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು. ಬರ ಪರಿಹಾರವನ್ನು ತುರ್ತಾಗಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್, ಜೈ ಕರ್ನಾಟಕ ಪರಿಷತ್‌ನ ನಾರಾಯಣ್, ದಸಂಸ ಎಂ.ವಿ.ಕೃಷ್ಣ, ಮೊತ್ತಳ್ಳಿ ಕೆಂಪೇಗೌಡ, ಕರವೇ ಶಂಕರೇಗೌಡ, ಜವರಯ್ಯ ಇತರರಿದ್ದರು.