ಟ್ರಯಲ್ ಬ್ಲಾಸ್ಟ್‌ಗೆ ತೀವ್ರ ವಿರೋಧ: ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ

Protest against trail blast Mandya
Published on

ಮಂಡ್ಯ: ಕೆಆರ್‌ಎಸ್ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಸರಣಿ ಪ್ರತಿಭಟನೆ ನಡೆಯುತ್ತಿವೆ.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ಕೃಷಿಕರಿಗೆ ಜಲಾಶಯ ಬದುಕು ನೀಡಿದೆ. ಆದರೆ ರಾಜ್ಯಸರ್ಕಾರ ಜನರ ಬದುಕನ್ನು ಕಸಿಯಲು ಮುಂದಾಗಿದೆ ಎಂದರು.

ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್‌ಗೆ ಮುಂದಾಗಿದೆ. ಈಗಾಗಲೇ ಐದು ಕಡೆ ಗುಂಡಿ ತೋಡಿ ಸಿದ್ಧತೆ ಮಾಡಿಕೊಂಡಿದೆ. ನ್ಯಾಯಾಲಯದ ಆದೇಶದಂತೆ ಟ್ರಯಲ್ ಬ್ಲಾಸ್ಟ್ ನಡೆಯುತ್ತಿದೆ ಎಂದು ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ಜಲಾಶಯಕ್ಕೆ ಮಾರಕವಾಗಿದ್ದರೂ ಯಾವ ಕಾರಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಮೈಸೂರು ಮಹಾರಾಜರು ನಿರ್ಮಿಸಿದ ಕೆಆರ್‌ಎಸ್ ಲಕ್ಷಾಂತರ ರೈತರಿಗೆ ಬದುಕು ಕಟ್ಟಿಕೊಟ್ಟಿದೆ. ಜಲಾಶಯದ ತಳ ಭಾಗದಲ್ಲಿರುವ ಕಲ್ಲು ಸೂಕ್ಷ್ಮವಾಗಿದೆ. ಟ್ರಯಲ್ ಬ್ಲಾಸ್ಟ್ ಮಾಡಿದರೆ ಕಲ್ಲಿನ ಪದರಕ್ಕೆ ಹಾನಿಯಾಗಲಿದ್ದು, ಜಲಾಶಯಕ್ಕೆ ತೊಂದರೆ ಎದುರಾಗಲಿದೆ. ಜಲಾಶಯದ ಸುರಕ್ಷತೆ ಮೊದಲ ಆದ್ಯತೆ ಆಗಬೇಕು. ಹಾಗಾಗಿ ಡ್ಯಾಂನಿಂದ 50 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ಕೊಡುವ ಮೂಲಕ ರೈತರ ಬದುಕಿನ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್, ಮುದ್ದೇಗೌಡ, ಸುಧೀರ್‌ಕುಮಾರ್, ಎಂ.ಎಲ್.ತುಳಸೀಧರ್, ಕೃಷ್ಣಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net