ಕುಡಿಯುವ ನೀರು, ಕೆರೆಗಳ ಶುದ್ಧೀಕರಣಕ್ಕೆ ಪಟ್ಟು

protest
Published on

ಎರಡನೇ ದಿನಕ್ಕೆ ಕಾಲಿಟ್ಟ ಹೋರಾಟ

ಪ್ರತಿಭಟನೆಯತ್ತ ಸುಳಿಯದ ಅಧಿಕಾರಿ, ಜನಪ್ರತಿನಿಧಿಗಳು

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ನೀರು ಪೂರೈಸುವುದೂ ಸೇರಿ ಈ ಭಾಗದ ಕೆರೆಗಳ ಶುದ್ಧೀಕರಣಕ್ಕೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಎರಡನೇ ದಿನವಾದ ಶನಿವಾರವೂ ಮುಂದುವರಿಯಿತು.
ನಗರದ ತಾಲೂಕು ಕಚೇರಿ ಮುಂಭಾಗ ಅರ್ಕಾವತಿ ನದಿಪಾತ್ರದ ಕೆರೆಗಳ ಸಂರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಹೋರಾಟದ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಗಮಿಸಿಲ್ಲವಾದ್ದರಿಂದ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಕ್ಕೆ ಯಾರಿಂದಲೂ ಸ್ಪಂದನೆ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ತಾಲೂಕು ಕಚೇರಿ ಮುಂಭಾಗವೇ ನಿದ್ರೆ:
ಶುಕ್ರವಾರ ಬೆಳಗ್ಗೆಯಿಂದ ಆರಂಭವಾದ ರೈತರ ಪ್ರತಿಭಟನೆಗೆ ತಾಲೂಕಿನ ಯಾವುದೇ ಅಧಿಕಾರಿ, ಜನಪ್ರತಿನಿಧಿಯೂ ಸ್ಪಂದಿಸಿಲ್ಲ. ಇದರಿಂದ ಗ್ರಾಮಸ್ಥರ ಆಕ್ರೋಶ ಕಟ್ಟೆಯೊಡೆದಿದ್ದು, ನಮಗೆ ನ್ಯಾಯ ಸಿಗುವವರೆಗೂ ಪ್ರತಿಭಟನಾ ಸ್ಥಳ ಬಿಟ್ಟು ತೆರಳುವುದಿಲ್ಲ ಎಂದು ಧರಣಿ ಮುಂದುವರಿಸಿದರು.

ಸೌಜನ್ಯವೂ ಇಲ್ಲ:
ಎರಡು ದಿನಗಳಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರೂ ಕನಿಷ್ಠ ಸೌಜನ್ಯಕ್ಕೂ ತಾಲೂಕಿನ ಶಾಸಕರಾಗಲಿ, ತಹಸೀಲ್ದಾರ್ ಆಗಲಿ ಇತ್ತ ಸುಳಿದಿಲ್ಲ. ಬಿಪಿ, ಮಧುಮೇಹ ಮತ್ತಿತರ ಅನಾರೋಗ್ಯ ಸಮಸ್ಯೆ ಇರುವವರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಏನಾದರೂ ಅನಾಹುತ ಸಂಭವಿಸಿದರೆ ತಾಲೂಕು ಆಡಳಿತವೇ ಹೊಣೆಯಾಗುತ್ತದೆ ಎಂದು ಪ್ರತಿಭಟನಾನಿರತ ವಸಂತ್‌ಕುಮಾರ್ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net