

ಕೊಳ್ಳೇಗಾಲ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಸಮಿತಿಯ ಕಾರ್ಯಕರ್ತೆಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಜಮಾಯಿಸಿದ್ದ ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ನೂರಾರು ಆಶಾ ಕಾರ್ಯಕರ್ತೆಯರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ತಾಲೂಕು ಕಚೇರಿಗೆ ತಲುಪಿ ಪ್ರತಿಭಟಿಸಿದರು. ನಂತರ ಗ್ರೇಡ್-2 ತಹಸೀಲ್ದಾರ್ ಬಿ.ವಿ.ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಕವಿತಾ ಮಾತನಾಡಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ 40 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಿದ್ದೆವು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಂಘಟನೆ ಜತೆಯಲ್ಲಿ ಸಭೆ ನಡೆಸಿದ್ದರು. ಈ ವೇಳೆ ಸಂಘಟನೆ ನಾವು 12 ಸಾವಿರ ಗೌರವಧನ ನೀಡಬೇಕೆಂದು ಒತ್ತಾಯ ಮಾಡಿದ್ದೆವು. ಸರ್ಕಾರ 10 ಸಾವಿರ ಗೌರವಧನ ನೀಡುವ ಭರವಸೆ ನೀಡಿತ್ತು. ಅಲ್ಲದೆ ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾ ಗುವುದು ಎಂದು ಭರವಸೆ ನೀಡಿದ್ದರು. ನಂತರ ಸಿಎಂ ಭರವಸೆ ಮೇರೆಗೆ ಪ್ರತಿಭಟನೆ ಕೈಬಿಡಲಾಗಿತ್ತು. ಆದರೀಗ ನಿಶ್ಚಿತ ಗೌರವಧನ 10 ಸಾವಿರ ಹಣವನ್ನು ಆಶಾ ಕಾರ್ಯಕರ್ತೆಯರಿಗೆ ನೀಡವ ಆದೇಶವನ್ನು ಹೊರಡಿಸಿಲ್ಲ. 1 ಸಾವಿರ ಬಜೆಟ್‌ನಲ್ಲಿ ಹೆಚ್ಚಿಸುವುದಾಗಿ ತಿಳಿಸಿದ್ದರು. ಅದನ್ನು ನೀಡಿಲ್ಲ. ಸರ್ಕಾರ ನೀಡಿದ ಭರವಸೆ ಈಡೇರಿಲ್ಲ. ಆಶಾ ಕಾರ್ಯಕರ್ತೆಯರ ನ್ಯಾಯಯುತವಾದ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಸಮಿತಿ ಅಧ್ಯಕ್ಷೆ ಉಮಾ, ಕೊಳ್ಳೇಗಾಲ ತಾಲೂಕು ಆಶಾ ಕಾರ್ಯ ಕರ್ತೆಯರ ಸಂಘದ ಅಧ್ಯಕ್ಷೆ ಚೆನ್ನಾಜಮ್ಮ, ಉಪಾಧ್ಯಕ್ಷೆ ನಂಜಮ್ಮಣಿ, ಪದಾಧಿಕಾರಿ ಅರಸಮ್ಮ, ಹನೂರು ತಾಲೂಕು ಅಧ್ಯಕ್ಷೆ ಸುಲೋಚನಾ, ರಾಜಮ್ಮ, ಸರೋಜಾ ಇತರರು ಇದ್ದರು.